ADVERTISEMENT

ಕೋವಿಡ್‌-19 ಚಿಕಿತ್ಸೆ ನಿರಾಕರಿಸಿದರೆ ಕ್ರಮ: ರಾಜ್ಯ ಸರ್ಕಾರ ಆದೇಶ

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 19:31 IST
Last Updated 28 ಜೂನ್ 2020, 19:31 IST
   

ಬೆಂಗಳೂರು: ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಕೋವಿಡ್‌ 19 ರೋಗಿಗಳಿಗೆ ಮತ್ತು ರೋಗ ಲಕ್ಷಣ ಇರುವವರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿರುವ ಕೆಲವು ಖಾಸಗಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳು ಕೋವಿಡ್‌ 19 ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್‌ ಈ ಆದೇಶ ಹೊರಡಿಸಿದ್ದಾರೆ.

ಎಲ್ಲ ಖಾಸಗಿ ಆಸ್ಪತ್ರೆಗಳು ಕೋವಿಡ್‌ಗೆ ಚಿಕಿತ್ಸೆ ನೀಡುವಂತೆ ಆದೇಶದಲ್ಲಿ ಸ್ಪಷ್ಟವಾಗಿ ಸೂಚಿಸಲಾಗಿದೆ. ಒಂದು ವೇಳೆ ಚಿಕಿತ್ಸೆ ನೀಡಲು ಹಿಂದೇಟು ಹಾಕಿದರೆ, ಅಂಥ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ‌2005 ಹಾಗೂ ಕರ್ನಾಟಕ ಪ್ರೈವೇಟ್‌ ಮೆಡಿಕಲ್‌ ಎಸ್ಟಾಬ್ಲಿಷ್‌ಮೆಂಟ್‌ ಕಾಯ್ದೆ 2017 ಪ್ರಕಾರ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

ADVERTISEMENT

ಕೋವಿಡ್–19 ರೋಗಿಗಳ ಚಿಕಿತ್ಸಾ ದರ ನಿಗದಿಯ ಬಗ್ಗೆ ಖಾಸಗಿ ಆಸ್ಪತ್ರೆಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಅದನ್ನು ಪರಿಷ್ಕರಿಸಬೇಕು ಎಂದು ಒತ್ತಾಯಿಸಿವೆ. ಈ ಮಧ್ಯೆ ಕೆಲವು ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿರುವ ಬಗ್ಗೆ ದೂರುಗಳು ಬಂದಿವೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2017 ರ ಅನ್ವಯ ಪ್ರತಿಯೊಂದು ವೈದ್ಯಕೀಯ ಸಂಸ್ಥೆಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸುವ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು ಕಡ್ಡಾಯ. ಅದರಲ್ಲೂ ವಿಶೇಷವಾಗಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಕಾರ್ಯದಲ್ಲಿ ವೈದ್ಯಕೀಯ ಸಂಸ್ಥೆಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ವಿಜಯಭಾಸ್ಕರ್‌ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.