ADVERTISEMENT

ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು– ಪ್ರಧಾನಿ ನಿಲುವೇನು?

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2022, 17:56 IST
Last Updated 24 ಆಗಸ್ಟ್ 2022, 17:56 IST

ಮಂಗಳೂರು: ‘ತುಳುನಾಡಿನ ಮೇಲೆ ವಿಶೇಷ ಪ್ರೀತಿ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿಯವರು ಸೆ. 2ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರು ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು’ ಎಂದು ವಿದ್ವಾಂಸ ಪುರುಷೋತ್ತಮ ಬಿಳಿಮಲೆ ಒತ್ತಾಯಿಸಿದ್ದಾರೆ.

‘ಈ ಕುರಿತು ನಾನು ವಿವರವಾಗಿ ಸಿದ್ಧಪಡಿಸಿದ್ದ ಮನವಿಯನ್ನು ಈಚೆಗೆ ರಾಜ್ಯಸಭಾ‌ ಸದಸ್ಯರಾಗಿರುವ ವೀರೇಂದ್ರ ಹೆಗ್ಗಡೆ ಅವರ ಮೂಲಕ ಪ್ರಧಾನಿಯವರಿಗೆ ಸಲ್ಲಿಸಲಾಗಿತ್ತು. ತುಳು ಗೊತ್ತಿರುವ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಡಿ.ವಿ. ಸದಾನಂದ ಗೌಡ ಹಾಗೂ ಕೇಂ‌ದ್ರ ಸಚಿವರಾದ ಶೋಭಾ ಕರಂದ್ಲಾಜೆ ಅವರು ಈ ಕುರಿತು ಪ್ರಧಾನಿ ಜೊತೆ ಮಾತಾಡಬೇಕು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಈ ಬಗ್ಗೆ ಮನವಿ ಸಲ್ಲಿಸಬೇಕು. ಸಾರ್ವಜನಿಕರು ಪ್ರಧಾನಿಯ ಗಮನ ಸೆಳೆಯಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.

‘ಇಷ್ಟೆಲ್ಲ ಮಾಡಿದ ಬಳಿಕವೂ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ, ಪ್ರಧಾನಿ ಅವರು ಮಂಗಳೂರಿಗೆ ಬಂದು ಹೋದಮೇಲೆ ‘ಸಂವಿಧಾನದ ಎಂಟನೇ ಪರಿಚ್ಛೇದಕ್ಕೆತುಳು ಸೇರಬೇಕು’ ಎಂದು ಭಾಷಣ ಮಾಡುವುದನ್ನು ನಿಲ್ಲಿಸಬೇಕು’ ಎಂದು ಅವರು ಹೇಳಿದ್ದಾರೆ.

ADVERTISEMENT

ಬಿಳಿಮಲೆ ಅವರು ಫೇಸ್‌ಬುಕ್‌ನಲ್ಲಿ ಪ್ರಕಟಿಸಿರುವ ಈ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಅನೇಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.