ಬೆಂಗಳೂರು: ವಿಸ್ಟ್ರಾನ್‌ನಲ್ಲಿ ದಾಂದಲೆಗೆ ಸಂಬಂಧಿಸಿ ದಾಖಲಾಗಿರುವ ಪ್ರಕರಣಗಳ ತನಿಖೆಯ ಮೇಲ್ವಿಚಾರಕರಾಗಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರನ್ನು (ಕಾನೂನು ಮತ್ತು ಸುವ್ಯವಸ್ಥೆ) ನೇಮಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಐ ಫೋನ್ ತಯಾರಿಕಾ ಕಂಪನಿ ವಿಸ್ಟ್ರಾನ್‌ನಲ್ಲಿ ಇದೇ 12ರಂದು ದಾಂದಲೆ ನಡೆದಿತ್ತು. ಈ ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ತೀರ್ಮಾನಿಸಿದೆ. ಹೀಗಾಗಿ, ಈ ಪ್ರಕರಣದ ತನಿಖೆಯ ಉಸ್ತುವಾರಿಯನ್ನು ಎಡಿಜಿಪಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿಸ್ಟ್ರಾನ್‌ನಲ್ಲಿ ನಡೆದ ದಾಂದಲೆಯಲ್ಲಿ ಕಂಪನಿಯ ಗಾಜುಗಳು, ಪೀಠೋಪಕರಣಗಳು, ಕಂಪ್ಯೂಟರ್, ಲ್ಯಾಪ್‌ಟಾಪ್, ಸಿಸಿಟಿವಿ ಕ್ಯಾಮೆರಾಗಳು, ಕಾರುಗಳು ಧ್ವಂಸವಾಗಿದ್ದು ₹ 437 ಕೋಟಿಗೂ ಹೆಚ್ಚು ಪ್ರಮಾಣದ ನಷ್ಟ ಉಂಟಾಗಿದೆ ಎಂದು ದೂರು ದಾಖಲಾಗಿದೆ. ಆಸ್ತಿಪಾಸ್ತಿ ನಷ್ಟಕ್ಕೆ ಕಾರಣರಾದವರ ಮೇಲೆ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 300ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಕೇಂದ್ರ ವಲಯದ ಐಜಿಪಿ ಭೇಟಿ ನೀಡಿದ್ದರು.
ಇದೇ 21ರಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.