ADVERTISEMENT

ಸರ್ಕಾರಿ ಶಾಲೆ ದತ್ತು ಪಡೆದುಕೊಳ್ಳುವ ಕಾರ್ಯ ಚಳವಳಿಯಾಗಲಿ: ಎಂ. ಆರ್‌. ದೊರೆಸ್ವಾಮಿ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2022, 20:45 IST
Last Updated 29 ಅಕ್ಟೋಬರ್ 2022, 20:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಳ್ಳುವ ಕಾರ್ಯ ಚಳವಳಿ ರೂಪದಲ್ಲಿ ನಡೆಯಬೇಕು’ ಎಂದು ಕರ್ನಾಟಕ ಸರ್ಕಾರದ ಶಿಕ್ಷಣ ಸಲಹೆಗಾರ ಪ್ರೊ. ಎಂ.ಆರ್. ದೊರೆಸ್ವಾಮಿ ಹೇಳಿದರು.

‘ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಳ್ಳುವ ಕಾರ್ಯ ಉತ್ತಮವಾಗಿ ನಡೆಯುತ್ತಿದೆ. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸಚಿವರು, ಶಾಸಕರು ತಮ್ಮ ಕ್ಷೇತ್ರದ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೊಳಿಸಬೇಕು. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನಲ್ಲಿರುವ (1,200) ಬಾಲಕಿಯರ ಶಾಲೆಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಮತ್ತು ಸೆಹೆಗಲ್ ಕಂಪನಿ ₹1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಮುಂದೆ ಬಂದಿವೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ 30–40 ಮಕ್ಕಳ ಗುಂಪಿಗೆ ಮಾರ್ಗದರ್ಶನ ನೀಡಲು ಶಿಕ್ಷಕರೊಬ್ಬರನ್ನು ನೇಮಕ ಮಾಡಬೇಕು. ಆ ಸಂಸ್ಥೆಯಲ್ಲಿ ಮಕ್ಕಳ ವಿದ್ಯಾಭ್ಯಾಸ ಮುಗಿಯುವವರೆಗೂ ಆ ಶಿಕ್ಷಕರೇ ಅವರ ಎಲ್ಲಾ ಬೆಳವಣಿಗೆಯ ಬಗ್ಗೆ ಮಾಹಿತಿ ಸಂಗ್ರಹಿಸಿಡಬೇಕು. ವಿದ್ಯಾರ್ಥಿಯ ಮುಂದಿನ ವಿದ್ಯಾಭ್ಯಾಸಕ್ಕೆ ಸೇರುವ ಶಿಕ್ಷಣ ಸಂಸ್ಥೆಗೆ ಈ ಮಾಹಿತಿಯನ್ನು ಹಸ್ತಾಂತರಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಉನ್ನತ ಶಿಕ್ಷಣದ ಪಠ್ಯಕ್ರಮದಲ್ಲಿ ಯೋಗ ಮತ್ತು ಧ್ಯಾನದ ವಿಷಯಗಳನ್ನು ಸೇರ್ಪಡೆ ಮಾಡಬೇಕು. ಇದಕ್ಕಾಗಿ ಬೆಂಗಳೂರಿನಲ್ಲಿರುವ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ವಿಶ್ವವಿದ್ಯಾಲಯ (ಎಸ್–ವ್ಯಾಸ) ತರಬೇತಿ ನೀಡಲು ಮುಂದೆ ಬಂದಿದೆ’ ಎಂದು ಸಲಹೆ ನೀಡಿದರು.

ಶಿಕ್ಷಣದಲ್ಲಿ ಆರೋಗ್ಯಕ್ಕೆ ಆದ್ಯತೆ ನೀಡಬೇಕು

ರಾಜ್ಯದಾದ್ಯಂತ ಡೀಮ್ಡ್ ವಿಶ್ವವಿದ್ಯಾಲಯಗಳು ಮತ್ತು ಖಾಸಗಿ ವೈದ್ಯಕೀಯ ಸಂಸ್ಥೆಗಳು ಸರ್ಕಾರಿ ಶಾಲೆಗಳಲ್ಲಿ ಆರೋಗ್ಯ ತಪಾಸಣೆ ಶಿಬಿರ ಗಳನ್ನು ಆಯೋಜಿಸಬೇಕು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.