ADVERTISEMENT

ಬೆಳಗಾವಿ: ಧಾರ್ಮಿಕ ಕೇಂದ್ರ, ಪ್ರವಾಸಿ ತಾಣಗಳಲ್ಲಿ ಕನ್ನಡ– ಮರಾಠಿ ಫಲಕಕ್ಕೆ ಸಹಮತ

ಕರ್ನಾಟಕ– ಮಹಾರಾಷ್ಟ್ರ ರಾಜ್ಯಪಾಲರ ನೇತೃತ್ವದಲ್ಲಿ ಸಮನ್ವಯ ಸಭೆ ಯಶಸ್ವಿ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2022, 21:53 IST
Last Updated 4 ನವೆಂಬರ್ 2022, 21:53 IST
ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಮಾತನಾಡಿದರು. ಕರ್ನಾಟಕ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಇದ್ದಾರೆ
ಸಭೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಮಾತನಾಡಿದರು. ಕರ್ನಾಟಕ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಇದ್ದಾರೆ   

ಬೆಳಗಾವಿ: ಗಡಿಭಾಗದ ಪ್ರಮುಖ ಧಾರ್ಮಿಕ ಕೇಂದ್ರಗಳು, ಪ್ರವಾಸಿ ತಾಣಗಳಲ್ಲಿ ಕನ್ನಡ ಹಾಗೂ ಮರಾಠಿ ಎರಡರಲ್ಲೂ ಫಲಕ ಹಾಕಬೇಕು ಎಂಬುದೂ ಸೇರಿದಂತೆ ವಿವಿಧ ವಿಷಯಗಳಲ್ಲಿ ಸಮನ್ವಯ ಸಾಧಿಸಲು ಕೊಲ್ಹಾಪುರದ ಸಭೆ ಯಶಸ್ವಿಯಾಯಿತು.

ಕರ್ನಾಟಕ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಹಾಗೂ ಮಹಾರಾಷ್ಟ್ರ ರಾಜ್ಯಪಾಲ ಭಗತ್‌ಸಿಂಗ್‌ ಕೋಶಿಯಾರಿ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ‘ಸಮನ್ವಯ’ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.

ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯದ ಭಕ್ತರು ಹೆಚ್ಚು ಹೋಗುತ್ತಾರೆ. ಅದೇ
ರೀತಿ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ಮಹಾರಾಷ್ಟ್ರದ ಭಕ್ತರೇ ಹೆಚ್ಚು. ಎರಡೂ ಕ್ಷೇತ್ರಗಳಲ್ಲಿ ಯಾತ್ರಿ ನಿವಾಸಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಲಾಯಿತು. ಮಹಾರಾಷ್ಟ್ರದಲ್ಲಿ ರಾಜ್ಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ವ್ಯವಸ್ಥೆ ಕಲ್ಪಿಸಬೇಕು ಎಂಬುದಕ್ಕೂ ಒಪ್ಪಿಗೆ ಸೂಚಿಸಲಾಯಿತು.

ADVERTISEMENT

ಕೊಲೆ, ಸುಲಿಗೆ, ಭ್ರೂಣಹತ್ಯೆ, ಬಾಲ್ಯವಿವಾಹ, ಅಕ್ರಮ ಮದ್ಯ ಸಾಗಣೆ ಸೇರಿದಂತೆ ಎಲ್ಲ ರೀತಿಯ ಅಪರಾಧ ಕೃತ್ಯಗಳನ್ನು ಭೇದಿಸಲು ಪರಸ್ಪರ ನೆರವಾಗಬೇಕು. ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಹರಿಸುವ ಪೂರ್ವದಲ್ಲಿ ಗಡಿ ಭಾಗದ ಎಲ್ಲ ಜಿಲ್ಲೆಗಳಿಗೂ ಮಾಹಿತಿ ಹಂಚಿಕೊಳ್ಳಬೇಕು ಎಂಬುದಕ್ಕೂ ಭಗತ್‌ಸಿಂಗ್‌ ಕೋಶಿಯಾರಿ ಅವರು ಒಪ್ಪಿಗೆ ಸೂಚಿಸಿದರು.

ಮಹಾರಾಷ್ಟ್ರಕ್ಕೆ ಕರ್ನಾಟಕದ ಆನೆಗಳ ದಾಳಿಯಿಂದ ಆನೆ– ಮಾನವ ಸಂಘರ್ಷ ಹೆಚ್ಚಿದೆ. ಇದರ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಕರ್ನಾಟಕದಲ್ಲಿ ಕೋವಿಡ್‌ನಿಂದ ಮೃತಪಟ್ಟ
ಮಹಾರಾಷ್ಟ್ರದವರಿಗೆ ಪರಿಹಾರ ನೀಡಲು ಅನುಕೂಲ ಮಾಡಿಕೊಡಬೇಕು ಎಂದೂ ಮಹಾರಾಷ್ಟ್ರದ ಅಧಿಕಾರಿಗಳು ಕೋರಿದರು. ಇದಕ್ಕೆ ರಾಜ್ಯದ ಅಧಿಕಾರಿಗಳು ಒಪ್ಪಿಗೆ ನೀಡಿದರು.

ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್‌ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆಗೆ ಮಹಾರಾಷ್ಟ್ರದ ಐದು ಜಿಲ್ಲೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.