ADVERTISEMENT

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ: ಎಐಡಿಎಸ್‌ಒ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಮೇ 2022, 20:03 IST
Last Updated 10 ಮೇ 2022, 20:03 IST
ಭಿತ್ತಿಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು
ಭಿತ್ತಿಪತ್ರಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು   

ಬೆಂಗಳೂರು: ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಕ್ರಮದ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ (ಎಐಡಿಎಸ್‌ಒ) ಬೆಂಗಳೂರು ಜಿಲ್ಲಾ ಸಮಿತಿ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಸೇರಿದ್ದ ಪ್ರತಿಭಟನಾಕಾರರು ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

‘ಭೂಗೋಳ ವಿಜ್ಞಾನ ವಿಷಯದ ಪ್ರಶ್ನೆಗಳು ಸೋರಿಕೆಯಾದ ಪ್ರಕರಣದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ (ಮೌಲ್ಯಮಾಪನ) ಪ್ರೊ.ಎಚ್.ನಾಗರಾಜ್ ಹಾಗೂ ಅವರ ವಿದ್ಯಾರ್ಥಿನಿ ಸೌಮ್ಯಾ ಎಂಬುವರನ್ನು ಬಂಧಿಸಲಾಗಿದೆ. ಅರ್ಥಶಾಸ್ತ್ರ, ಸಮಾಜವಿಜ್ಞಾನ ಹಾಗೂ ಇಂಗ್ಲಿಷ್ ವಿಷಯದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ದೃಢಪಟ್ಟಿದೆ. ಶೈಕ್ಷಣಿಕ ರಂಗದಲ್ಲೇ ಇಂಥ ಅಕ್ರಮ ನಡೆದಿರುವುದು ನಾಚಿಕೆಯ ಸಂಗತಿ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಅಕ್ರಮ ಹಾದಿಯ ಮೂಲಕ ಉಪನ್ಯಾಸಕರಾಗಿ ಕೆಲಸ ಗಿಟ್ಟಿಸುವವರಿಂದ ಪರಿಣಾಮಕಾರಿ ಬೋಧನೆ ನಿರೀಕ್ಷಿಸಲು ಸಾಧ್ಯವೆ. ಅವರಿಗೆ ನೈತಿಕತೆಯ ಪಾಠ ಹೇಳಲು ಸಾಧ್ಯವೆ’ ಎಂದುಜಿಲ್ಲಾ ಘಟಕದ ಕಾರ್ಯದರ್ಶಿ ಕಲ್ಯಾಣ್ ಕುಮಾರ್ ಪ್ರಶ್ನಿಸಿದ್ದಾರೆ.

ಜಿಲ್ಲಾ ಘಟಕದ ಖಜಾಂಚಿ ವಿನಯ್‌ ಚಂದ್ರ, ‘ಈ ಅಕ್ರಮದಲ್ಲಿ ಪ್ರಭಾವಿಗಳೂ ಭಾಗಿಯಾಗಿರುವ ಶಂಕೆ ಇದೆ. ಈ ದಿಸೆಯಲ್ಲೂ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.