ADVERTISEMENT

ಗಡಿಗಳಲ್ಲಿ ಸಿಲುಕಿಕೊಂಡವರಿಗೆ ಆಶ್ರಯ: ಮುಖ್ಯಮಂತ್ರಿ ಯಡಿಯೂರಪ್ಪ

ಸರ್ವಪಕ್ಷಗಳ ನಾಯಕರ ಸಲಹೆ ಗಂಭೀರವಾಗಿ ಪರಿಗಣನೆ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2020, 20:15 IST
Last Updated 29 ಮಾರ್ಚ್ 2020, 20:15 IST
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ‘ಕೊರೊನಾ ವೈರಸ್‌ ಸೋಂಕು ಹರಡದಂತೆ ತಡೆಯಲು ಲಾಕ್‌ಡೌನ್‌ ಘೋಷಿಸಿದ ಪರಿಣಾಮ ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ನಿಭಾಯಿಸುವ ಕುರಿತಂತೆ ಸರ್ವಪಕ್ಷಗಳ ನಾಯಕರ ಜೊತೆ ವಿಧಾನಸೌಧದಲ್ಲಿ ಭಾನುವಾರ ಸಭೆ ನಡೆಸಿದ ಬಳಿಕ ಸರ್ಕಾರ ತೆಗೆದುಕೊಂಡ ತೀರ್ಮಾನಗಳ ಕುರಿತು ಮಾಹಿತಿ ನೀಡಿದ ಅವರು, ‘ಸೋಂಕಿಗೆ ಒಳಗಾಗಿರುವ ಪ್ರಯಾಣಿಕರನ್ನು ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಮತ್ತು ಆರೋಗ್ಯವಾಗಿರುವವರನ್ನು ಅವರವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಸೋಂಕು ನಿವಾರಣೆಗೆ ಸರ್ಕಾರ ತೆಗೆದುಕೊಂಡ ಕ್ರಮಗಳಿಗೆ ಎಲ್ಲ ನಾಯಕರು ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿದ್ದು, ಸಂಕಷ್ಟದ ಸನ್ನಿವೇಶದಲ್ಲಿ ಕೈಜೋಡಿಸುವ ಭರವಸೆ ನೀಡಿದ್ದಾರೆ. ಸರ್ವಪಕ್ಷಗಳ ನಾಯಕರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಗೊಳಿಸಲಾಗುವುದು’ ಎಂದು ಹೇಳಿದರು.

ADVERTISEMENT

‘ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ದಾದಿಯರು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿ ಪೂರೈಸಲು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನ ಒದಗಿಸಲು ತಕ್ಷಣ ಕ್ರಮಕೈಗೊಳ್ಳಲಾಗುವುದು. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು‘ ಎಂದೂ ಯಡಿಯೂರಪ್ಪ ತಿಳಿಸಿದ್ದಾರೆ.

ರೈತರ ಕೃಷಿ ಉತ್ಪನ್ನಗಳ ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ತಲುಪಿಸಲು, ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು. ಫಲಾನುಭವಿಗಳ ಮನೆಬಾಗಿಲಿಗೆ ಪಡಿತರ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆಯೂ ಪರಿಶೀಲಿಸಲಾಗುವುದು ಎಂದೂ ಅವರು ವಿವರಿಸಿದ್ದಾರೆ.

‘ವಿದೇಶದಿಂದ ಬಂದವರ ಸಂಪರ್ಕ ಇಲ್ಲದವರಿಗೂ ಸೋಂಕು ತಗಲಿದೆ. ಈ ವಿಷಯವನ್ನು ಸರ್ಕಾರಗಂಭೀರವಾಗಿ ಪರಿಗಣಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಆಗ್ರಹಿಸಿದರು.

*
ಮುಸ್ಲಿಂ ಸಮುದಾಯದವರ ಜೊತೆ ಸಭೆ ನಡೆಸಿದ್ದೇನೆ. ಮನೆಗಳಲ್ಲಿಯೇ ಪ್ರಾರ್ಥನೆ ನಡೆಸಲು ಅವರು ಒಪ್ಪಿದ್ದಾರೆ.
-ಬಿ.ಎಸ್‌. ಯಡಿಯೂರಪ್ಪ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.