ADVERTISEMENT

ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ವಿರುದ್ಧ ಲಂಚ ಆರೋಪ: ಸಿಐಡಿ ತನಿಖೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2023, 4:29 IST
Last Updated 9 ಆಗಸ್ಟ್ 2023, 4:29 IST
ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ
ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ   

ಬೆಂಗಳೂರು: ‘ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಲಂಚ ನೀಡುವಂತೆ ತಮ್ಮನ್ನು ಒತ್ತಾಯಿಸಿದರು’ ಎಂದು ಆರೋಪಿಸಿ ಕೃಷಿ ಇಲಾಖೆ ಅಧಿಕಾರಿಗಳು ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾದ ಪತ್ರದ ಬಗ್ಗೆ ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಗೃಹ ಸಚಿವರ ಜತೆ ಚರ್ಚಿಸಿದ ಬಳಿಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.

ಇದಕ್ಕೂ ಮೊದಲು, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳು ಪತ್ರ ಬರೆದಿಲ್ಲವೆಂದು ರಾಮನಗರದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ. ಈ  ಕುರಿತು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ತನಿಖೆ ಮಾಡಿ ಸತ್ಯ ಬಯಲಿಗೆಳೆಯುವಂತೆ ಪೊಲೀಸರಿಗೆ ಸೂಚಿಸಲಾಗಿದೆ’ ಎಂದರು.

ADVERTISEMENT

ಕೆಪಿಸಿಸಿಯಿಂದ ದೂರು: ‘ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತು ಕಾಂಗ್ರೆಸ್ ಸರ್ಕಾರದ ತೇಜೋವಧೆಯಾಗುವಂತೆ ಸುಳ್ಳು ಆರೋಪ ಮಾಡಿ ನಕಲಿ ಸಹಿಯೊಂದಿಗೆ ರಾಜ್ಯಪಾಲರಿಗೆ ದೂರು ನೀಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ನಕಲಿ ಪತ್ರಗಳನ್ನು ಬರೆಯುವ ಮತ್ತು ಅದಕ್ಕೆ ಕುಮ್ಮಕ್ಕು ನೀಡುವ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಮುಂದೆಂದೂ ಇಂತಹ ಕೆಲಸಗಳಿಗೆ ಯಾರೂ ಕೈ ಹಾಕದಂತೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಗೃಹ ಸಚಿವ ಜಿ. ಪರಮೇಶ್ವರ ಮತ್ತು ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಅವರಿಗೆ ಕೆಪಿಸಿಸಿ ಮನವಿ ಸಲ್ಲಿಸಿದೆ.

ಶಾಸಕರೂ ಆಗಿರುವ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಹುಚ್ಚಪ್ಪ, ರಾಮಚಂದ್ರಪ್ಪ, ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್‌ ಬಾಬು, ಮಾಧ್ಯಮ ಸಂಯೋಜಕ ರಾಜು ಜಿ.ಸಿ.,  ವಿಧಾನ ಪರಿಷತ್‌ ಸದಸ್ಯ ದಿನೇಶ್‌ ಗೂಳಿಗೌಡ ಈ ಮನವಿ ಸಲ್ಲಿಸಿದ್ದಾರೆ.

‘ಕೃಷಿ ಇಲಾಖೆ ಜವಾಬ್ದಾರಿಯನ್ನು ಚಲುವರಾಯಸ್ವಾಮಿ ಅತ್ಯಂತ ಪ್ರಾಮಾಣಿಕವಾಗಿ, ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ. ಅವರ ಜನಪ್ರಿಯತೆ, ಏಳಿಗೆ ಸಹಿಸದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅವರ ವಿರುದ್ಧ ಪಿತೂರಿ ಮಾಡುತ್ತಿವೆ. ಹೀಗಾಗಿ, ಅವರ ವಿರುದ್ಧ ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಇಲ್ಲಸಲ್ಲದ ಆರೋಪಗಳನ್ನು ಸೃಷ್ಟಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಉದ್ದೇಶಪೂರ್ವಕವಾಗಿ ಮಾನಹಾನಿ ಮಾಡಲೆಂದೇ ಇದನ್ನು ಮಾಡಿರುವುದು ಗೊತ್ತಾಗಿದೆ. ಯಾವೊಬ್ಬ ಕೃಷಿ ಅಧಿಕಾರಿಯೂ ಈ ರೀತಿಯ ಪತ್ರ ಬರೆದಿಲ್ಲ, ಸಹಿ ಕೂಡಾ ಮಾಡಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಸಚಿವರ ಮೇಲೆ ವೃಥಾ ಲಂಚದ ಆರೋಪ ಮಾಡಿ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿ, ನಕಲಿ ಸಹಿ ಮಾಡಿ ದೂರು ಕೊಟ್ಟಿರುತ್ತಾರೆ. ಇದು ಅಕ್ಷಮ್ಯ ಅಪರಾಧ. ಆ ಮೂಲಕ, ಚಲುವರಾಯಸ್ವಾಮಿ ಅವರ ತೇಜೋವಧೆಗೆ ಯತ್ನಿಸಲಾಗಿದೆ. ಕಳಂಕ ತರುವ ಪ್ರಯತ್ನ ಮಾಡಲಾಗಿದೆ’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.