ವಿಧಾನಸಭೆ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ವಕ್ಫ್ ಮಸೂದೆಗೆ ತಿದ್ದುಪಡಿ ತರುವ ಉದ್ದೇಶದ ಮಸೂದೆ ಹಿಂಪಡೆಯಬೇಕು, ತನ್ನ ಬಜೆಟ್‌ನಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟರ ಕಲ್ಯಾಣ ಯೋಜನೆಗಳಿಗೆ ಅನುದಾನ ಮೀಸಲಿಡಬೇಕು, ಯುಜಿಸಿ ನಿಯಮಾವಳಿಗೆ ತಿದ್ದುಪಡಿ ಕೈಬಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ಮಂಡಿಸಿ, ಅಂಗೀಕಾರ ಪಡೆಯಿತು.
'ಒಂದು ವರ್ಗದ ಮತಕ್ಕಾಗಿ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ನಿರ್ಣಯ ಮಂಡಿಸಲಾಗಿದೆ. ಈ ನಡೆಗೆ ಧಿಕ್ಕಾರ’ ಎಂದು ಘೋಷಣೆ ಕೂಗಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು.
‘ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯಡಿ ಮೀಸಲಿಟ್ಟ ಹಣವನ್ನು ‘ಗ್ಯಾರಂಟಿ’ ಯೋಜನೆಗಳಿಗೆ ಹಂಚಿಕೆ ಮಾಡಿರುವ ರಾಜ್ಯ ಸರ್ಕಾರಕ್ಕೆ, ಕೇಂದ್ರ ಸರ್ಕಾರ ಕೂಡಾ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟರ ಕಲ್ಯಾಣ ಯೋಜನೆಗಳಿಗೆ ಅನುದಾನ ಮೀಸಲಿಡಬೇಕು ಎಂದು ನಿರ್ಣಯ ಕೈಗೊಳ್ಳುವ ನೈತಿಕತೆ ಇಲ್ಲ’ ಎಂದು ವಿಪಕ್ಷ ನಾಯಕ ಆರ್. ಅಶೋಕ ಆಕ್ಷೇಪ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯಿತಿಗಳಲ್ಲೂ ಅನಧಿಕೃತ ನಿವೇಶನಗಳಿಗೆ ಇ– ಖಾತಾ ಮೂಲಕ ‘ಬಿ’ ಖಾತಾ ಕೊಡಲು ಮತ್ತು ತೆರಿಗೆ ವ್ಯಾಪ್ತಿಗೆ ತರಲು ಅವಕಾಶ ಕಲ್ಪಿಸುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ತಿದ್ದುಪಡಿ) ಮಸೂದೆ ಮತ್ತು ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆಗಳಿಗೂ ವಿಧಾನಸಭೆ ಅಂಗೀಕಾರ ನೀಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.