ಬೆಂಗಳೂರು: ದಾಬಸ್‌ಪೇಟೆ-ದೊಡ್ಡಬಳ್ಳಾಪುರ ನಡುವೆ ನಿರ್ಮಾಣವಾಗಲಿರುವ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರದಲ್ಲಿ (ಕ್ವಿನ್ ಸಿಟಿ) ಉನ್ನತ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಲು ಅಮೆರಿಕ ಸಂಸ್ಥೆಗಳು ಆಸಕ್ತಿ ತೋರಿವೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಹೂಡಿಕೆದಾರರನ್ನು ಆಕರ್ಷಿಸಲು ಅಮೆರಿಕ ಪ್ರವಾಸದಲ್ಲಿರುವ ಅವರು, ಕ್ವಿನ್ ಸಿಟಿಯಲ್ಲೂ ಜ್ಞಾನ, ಆರೋಗ್ಯ ಸಂಸ್ಥೆಗಳನ್ನು ಸ್ಥಾಪಿಸುವಂತೆ ಹಲವು ಕಂಪನಿಗಳಿಗೆ ಆಹ್ವಾನ ನೀಡಿದ್ದಾರೆ.
ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ, ಕೇರ್ ಬಿಸಿನೆಸ್ ಸ್ಕೂಲ್ ಮತ್ತು ಬ್ಲೂಮ್‌ಬರ್ಗ್ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಉನ್ನತ ಅಧಿಕಾರಿಗಳ ಜತೆಗೆ ಮಾತುಕತೆ ನಡೆಸಿದ್ದಾರೆ.
‘ಕರ್ನಾಟಕ ಸರ್ಕಾರ ಮತ್ತು ರಾಜ್ಯದ ಶೈಕ್ಷಣಿಕ ಸಂಸ್ಥೆಗಳ ಜತೆಗಿನ ಪಾಲುದಾರಿಕೆ ಸಾಧ್ಯತೆಗಳನ್ನು ಈ ಸಭೆಗಳಲ್ಲಿ ಚರ್ಚಿಸಲಾಗಿದೆ. ಜಿಇ ಹೆಲ್ತ್‌ಕೇರ್, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ಎಲ್3 ಹ್ಯಾರಿಸ್ ಟೆಕ್ನಾಲಜೀಸ್‌ನ ಪ್ರತಿನಿಧಿಗಳೊಂದಿಗಿನ ಮಾತುಕತೆಗಳೂ ಆಶಾದಾಯಕವಾಗಿವೆ’ ಎಂದು ಸಚಿವ ಪಾಟೀಲ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.