ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ; ಸರ್ಕಾರದಿಂದ ಬೇಜವಾಬ್ದಾರಿತನ: ವಿಜಯೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜನವರಿ 2025, 6:45 IST
Last Updated 30 ಜನವರಿ 2025, 6:45 IST
 ಬಿ.ವೈ. ವಿಜಯೇಂದ್ರ 
 ಬಿ.ವೈ. ವಿಜಯೇಂದ್ರ    

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ನಡೆಸಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈ ಕುರಿತು ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ರಾಜ್ಯದಲ್ಲಿ ಗೌರವಧನ ನೆಚ್ಚಿಕೊಂಡೇ ಜೀವನ ಸಾಗಿಸುತ್ತಿರುವ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಹಾಗೂ ತಾಲ್ಲೂಕು ಮಟ್ಟದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಸಿಬ್ಬಂದಿಗಳು ವೇತನ ಹೆಚ್ಚಳ, ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೊರೆವ ಚಳಿಯನ್ನೂ ಲೆಕ್ಕಿಸದೆ ತಮ್ಮ ಹಕ್ಕಿಗಾಗಿ ಹೋರಾಟ ನಡೆಸುತ್ತಿದ್ದರೂ ಅವರ ಅಹವಾಲು ಆಲಿಸದ ಕಾಂಗ್ರೆಸ್ ಸರ್ಕಾರದ ನಡೆ ಬೇಜವಾಬ್ದಾರಿತನದ ಪರಮಾವಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಂಬಳದ ಜೊತೆ ಪ್ರೋತ್ಸಾಹ ಧನ ವಿತರಣೆಯಲ್ಲೂ ವಿಳಂಬ ಧೋರಣೆ ಅನುಸರಿಸಿ ಲಕ್ಷಾಂತರ ಸಿಬ್ಬಂದಿಗಳನ್ನು ಸಂಕಷ್ಟಕ್ಕೆ ತಳ್ಳಿದ್ದ ಈ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸುವಲ್ಲಿಯೂ ಸಂಪೂರ್ಣ ವಿಫಲವಾಗಿ ವಚನ ಭ್ರಷ್ಟತೆಯ ಹಣೆಪಟ್ಟಿ ಅಂಟಿಸಿಕೊಂಡಿದೆ. ಇನ್ನಾದರೂ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಕೂಡಲೇ ಆ ಶ್ರಮಿಕ ಕಾರ್ಯಕರ್ತೆಯರಿಗೆ ಸಂಬಳ, ಭತ್ಯೆ ಹಾಗೂ ಇನ್ನಿತರೆ ಸವಲತ್ತುಗಳನ್ನು ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ’ ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.