ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಧರಣಿ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜನವರಿ 2023, 10:59 IST
Last Updated 27 ಜನವರಿ 2023, 10:59 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ಶಿಕ್ಷಕಿಯರೆಂದು ಪರಿಗಣಿಸಬೇಕು. ಗ್ರ್ಯಾಚ್ಯುಟಿ ಪಾವತಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಧರಣಿ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ಮುಷ್ಕರ ನಿರತ ಅಂಗನವಾಡಿ ಕಾರ್ಯಕರ್ತರನ್ನು ರಾಜ್ಯದ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಅತ್ಯಂತ ಖಂಡನೀಯ. ಸಿಎಂ ಬೊಮ್ಮಾಯಿ ಅವರು ತಕ್ಷಣ ಅಂಗನವಾಡಿ ಕಾರ್ಯಕರ್ತರನ್ನು ಕರೆದು ಅವರ ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಅಂಗನವಾಡಿ ಕಾರ್ಯಕರ್ತರು ಮಳೆ, ಚಳಿ, ಗಾಳಿ ಎನ್ನದೆ ಬೀದಿಯಲ್ಲಿ ಠಿಕಾಣಿ ಹೂಡಿ ಮುಷ್ಕರದಲ್ಲಿ ತೊಡಗಿದ್ದಾರೆ. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇದಾದ ನಂತರವೂ ರಾಜ್ಯ ಬಿಜೆಪಿ ಸರ್ಕಾರ ಹಠಕ್ಕೆ ಬಿದ್ದು ಅಂಗನವಾಡಿ ಕಾರ್ಯಕರ್ತರ ಪ್ರಾಣದ ಜೊತೆ ಚೆಲ್ಲಾಟ ನಡೆಸುತ್ತಿರುವುದು ವಿಷಾದನೀಯ’ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ADVERTISEMENT

‘ಸೇವೆ ಕಾಯಂ, ವೇತನ ಹೆಚ್ಚಳ ಮತ್ತು ಮತ್ತು ನಿವೃತ್ತಿ ಸೌಲಭ್ಯವೂ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗನವಾಡಿ ಕಾರ್ಯಕರ್ತರು ಸರ್ಕಾರದ ಮುಂದಿಟ್ಟಿದ್ದಾರೆ. ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಮಾತುಕತೆಯ ಮೂಲಕ ಮುಷ್ಕರ ನಿರತರ ಬೇಡಿಕೆ ಈಡೇರಿಸಲು ಸಾಧ್ಯವಿತ್ತು. ಸರ್ಕಾರ ಉದ್ಧಟತನದಿಂದ ಸಂಘರ್ಷದ ಹಾದಿ ಆಯ್ದುಕೊಂಡಿದೆ’ ಎಂದು ಗುಡುಗಿದ್ದಾರೆ.

‘ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತರ ಗೌರವಧನವನ್ನು ₹5,000ದಿಂದ ₹8000ಕ್ಕೆ ಮತ್ತು ಸಹಾಯಕಿಯರ ವೇತನವನ್ನು ₹2500ದಿಂದ ₹4000ಕ್ಕೆ ಹೆಚ್ಚಿಸಿದ್ದೆವು. ಆದರೆ, ಬಿಜೆಪಿ ಸರ್ಕಾರ ಅಂಗನವಾಡಿ ಕಾರ್ಯಕರ್ತರ ಮುಷ್ಕರವನ್ನು ತಡೆಯುವ ಹತಾಶ ಪ್ರಯತ್ನ ಮಾಡುತ್ತಿದ್ದು ಇದು ಪ್ರಜಾತಂತ್ರ ವಿರೋಧಿ ಪ್ರಯತ್ನ’ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.