ಬೆಂಗಳೂರು: ‘ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಶೀಘ್ರ ಸಲ್ಲಿಸಬೇಕು. ಈ ತಿಂಗಳ ಕೊನೆಯಲ್ಲಿಯೇ ಒಳಮೀಸಲಾತಿ ಜಾರಿಗೊಳ್ಳಲು ಸಹಕರಿಸಬೇಕು’ ಎಂದು ಮಾಜಿ ಸಚಿವ ಎಚ್.ಆಂಜನೇಯ ಅವರು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರಿಗೆ ಮನವಿ ಮಾಡಿಕೊಂಡರು.
‘ಮೂರು ದಶಕಗಳ ಮಾದಿಗ ಸಮುದಾಯದ ಸಮಗ್ರ ಹೋರಾಟದ ಫಲವಾಗಿ ಒಳಮೀಸಲಾತಿ ಜಾರಿಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ಅದನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬದ್ಧರಾಗಿದ್ದಾರೆ. ಆದ್ದರಿಂದ, ಸಮಗ್ರ ಸಮೀಕ್ಷಾ ವರದಿಯನ್ನು ಆದಷ್ಟು ಬೇಗ ಸಿದ್ಧಪಡಿಸಬೇಕು’ ಎಂದು ಕೋರಿಕೊಂಡರು.
‘ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಅವಧಿಯನ್ನು ಮೂರು ಬಾರಿ ವಿಸ್ತರಿಸಲಾಗಿದೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ವಿಸ್ತರಿಸಬಾರದು. ಬಿಬಿಎಂಪಿ ವ್ಯಾಪ್ತಿಯಲ್ಲಿ ಜುಲೈ 6ರವರೆಗೆ ಸಮೀಕ್ಷೆ ನಡೆಯಲಿದೆ. ಅದನ್ನೂ ವಿಸ್ತರಿಸಬಾರದು. ಈ ದಿಸೆಯಲ್ಲಿ ಆಯೋಗ ಕಠಿಣ ಕ್ರಮಕೈಗೊಳ್ಳಬೇಕು’ ಎಂದರು.
‘ಸರ್ಕಾರಕ್ಕೆ ಶೀಘ್ರ ವರದಿ ಸಲ್ಲಿಸಿದರೆ, ಈ ತಿಂಗಳ ಕೊನೆಯಲ್ಲಿಯೇ ಒಳಮೀಸಲಾತಿ ಜಾರಿಗೊಳ್ಳಲಿದೆ. ಇದರಿಂದ ನೊಂದ, ಕಾಯುತ್ತಿರುವ ಸಮುದಾಯಗಳಿಗೆ ನ್ಯಾಯ ಒದಗಿಸಿದಂತಾಗುತ್ತದೆ’ ಎಂದರು.
ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.