ಮೈಸೂರು: ‘ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ ನಡೆದಿದೆ. ಒಂದು- ಎರಡು ತಿಂಗಳು ಯೋಜನೆ ತಡವಾದರೂ ಏನೂ ಸಮಸ್ಯೆಯಾಗದು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕೇಂದ್ರ ಸರ್ಕಾರ ಅಕ್ಕಿ ನೀಡದ ಕಾರಣ ಅನ್ನಭಾಗ್ಯ ಯೋಜನೆ ಜಾರಿಗೆ ತೊಡಕಾಗಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದರು. ‘ಕೇಂದ್ರದಿಂದ ಅಕ್ಕಿ ಸಿಗದೇ ಇದ್ದರೂ ಪರ್ಯಾಯ ಮಾರ್ಗಗಳಿವೆ. ಈಗಾಗಲೇ ಐದು ಕೆ.ಜಿ. ಅಕ್ಕಿಯನ್ನು ನೀಡಲಾಗುತ್ತಿದೆ. ಅಕ್ಕಿ ಬದಲಾಗಿ ಬೇರೆ ಧಾನ್ಯಗಳನ್ನು ಸಹ ನೀಡಬಹುದು, ಆತಂಕಪಡುವಂತಹ ಸ್ಥಿತಿ ಇಲ್ಲ’ ಎಂದರು.
‘ಬೆಂಗಳೂರು– ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಕೆಲವು ತಾಂತ್ರಿಕ ಸಮಸ್ಯೆಯೂ ಕಾರಣ ಇರಬಹುದು. ಇದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ನಾವು ಸಹ ಅವರ ಜೊತೆಗೂಡಿ ಸರಿಪಡಿಸಲು ಪ್ರಯತ್ನ ಮಾಡುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
‘ಕಾಂಗ್ರೆಸ್ ಸರ್ಕಾರ ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಪ್ರಯತ್ನ ಆರಂಭವಾಗಿದೆ. ಮಹಿಳೆಯರ ಉಚಿತ ಪ್ರಯಾಣ ಯೋಜನೆ ‘ಶಕ್ತಿ’ಗೆ ಈಗಾಗಲೇ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಆಗಸ್ಟ್ 15ರಿಂದ ಜಾರಿಯಾಗಲಿದೆ. ಹದಗೆಟ್ಟಿರುವ ರಸ್ತೆಗಳನ್ನು ಮೂರು ಹಂತಗಳಲ್ಲಿ ಸರಿಪಡಿಸಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.