ADVERTISEMENT

ಶಾಲೆ – ಕಾಲೇಜುಗಳಿಗೆ ರಜೆ ಕೊಟ್ಟು, ಆನ್‌ಲೈನ್‌ ತರಗತಿ ಆರಂಭಿಸಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2022, 10:50 IST
Last Updated 8 ಫೆಬ್ರುವರಿ 2022, 10:50 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಬೆಂಗಳೂರು: ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ ರಜೆ ಕೊಟ್ಟು ಆನ್‌ಲೈನ್‌ ತರಗತಿ ಆರಂಭಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ರಜೆ ಘೋಷಿಸಿ ಆನ್‌ಲೈನ್ ತರಗತಿಗಳನ್ನು ಶುರು ಮಾಡಬೇಕು ಎಂದು ಮುಖ್ಯಮಂತ್ರಿಯನ್ನು ಆಗ್ರಹಿಸುತ್ತೇನೆ’ ಎಂದಿದ್ದಾರೆ.

‘ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳು ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ’ ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

‘ವಿದ್ಯಾರ್ಥಿಗಳು ಸಂಘರ್ಷಕ್ಕೆ ಇಳಿದಿರುವ ಕಡೆಗಳಲ್ಲಿ ಪುಂಡ ವಿದ್ಯಾರ್ಥಿಗಳ ಮೇಲೆ ಕಠಿಣ ಕ್ರಮಕೈಗೊಳ್ಳದೆ ಪೊಲೀಸರು ಮೂಕ ಪ್ರೇಕ್ಷಕರಾಗಿರುವುದು ವಿದ್ಯಾರ್ಥಿಗಳ ಹೆತ್ತವರಲ್ಲಿ ಆತಂಕ ಹುಟ್ಟಿಸಿದೆ‘ ಎಂದು ಅವರು ಹೇಳಿದ್ದಾರೆ.

‘ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ‌ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ಬಿಜೆಪಿ ಸರ್ಕಾರ ಈಗ ಪರಿಸ್ಥಿತಿ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ‘ ಎಂದು ಆರೋಪಿಸಿದ್ದಾರೆ.

‘ಹಿಜಾಬ್ ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ಶಿಕ್ಷಣ ಸಚಿವ ನಾಗೇಶ್‌ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ‘ ಎಂದು ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಪರಿಸ್ಥಿತಿಯ ಗಂಭೀರತೆಯನ್ನು ಮುಖ್ಯಮಂತ್ರಿ ಅವರು ಈಗಲಾದರೂ ಅರಿತುಕೊಂಡು ತಕ್ಷಣ ಮಧ್ಯಪ್ರವೇಶಿಸಿ ಶಾಲಾ‌-ಕಾಲೇಜುಗಳಿಗೆ ರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್‌ಲೈನ್‌ ತರಗತಿಗಳನ್ನು ತಕ್ಷಣ ಶುರು ಮಾಡಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.

ಸಂಘರ್ಷವಿರುವ ಕಾಲೇಜುಗಳಿಗೆ ರಜೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಕ್ಷಣ ಸಚಿವರಿಗೆ ಸೂಚಿಸಿದ್ದಾರೆ. ಪರಿಸ್ಥಿತಿ ನೋಡಿಕೊಂಡು ರಜೆ ನೀಡುವುದಾಗಿ ಶಿಕ್ಷಣ ಸಚಿವ ನಾಗೇಶ್‌ ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.