ADVERTISEMENT

ಮತಾಂತರ ನಿಷೇಧಕ್ಕೆ ಸುಗ್ರೀವಾಜ್ಞೆ: ಗೃಹ ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2021, 20:53 IST
Last Updated 31 ಡಿಸೆಂಬರ್ 2021, 20:53 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: ‘ರಾಜ್ಯದಲ್ಲಿ ಮತಾಂತರ ನಿಷೇಧಿಸುವ ಉದ್ದೇಶದಿಂದ ಸಿದ್ಧಪಡಿಸಿರುವ ಕರ್ನಾಟಕ ಧಾರ್ಮಿಕ ಹಕ್ಕುಗಳ ಸಂರಕ್ಷಣಾ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಕಾಯ್ದೆಯಾಗಿ ಜಾರಿಗೊಳಿಸಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

‘ಪ್ರಜಾವಾಣಿ’ ಜತೆ ಶುಕ್ರವಾರ ಮಾತನಾಡಿದ ಅವರು, ‘ರಾಜ್ಯದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಮತಾಂತರವನ್ನು ನಿಗ್ರಹಿಸುವ ದೃಷ್ಟಿಯಿಂದ ತರಲಾಗಿರುವ ಮಸೂದೆಯನ್ನು ಬೆಳಗಾವಿಯಲ್ಲಿ ನಡೆದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗಿದೆ. ಕಾರಣಾಂತರದಿಂದ ವಿಧಾನಪರಿಷತ್ತಿನಲ್ಲಿ ಮಂಡಿಸಲು ಸಾಧ್ಯವಾಗಿಲ್ಲ. ವಿಳಂಬವಾಗಬಾರದು ಎಂಬ ಕಾರಣಕ್ಕೆ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡು ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳಿಸಲಾಗುವುದು. ಅವರ ಒಪ್ಪಿಗೆ ಪಡೆದು ಕಾಯ್ದೆ ಜಾರಿ ಮಾಡುವ ಉದ್ದೇಶ ಇದೆ’ ಎಂದು ಅವರು ವಿವರಿಸಿದರು.

‘ಮುಂದೆ ನಡೆಯಲಿರುವ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ವಿಧಾನಪರಿಷತ್ತಿನಲ್ಲಿ ಈ ಬಗ್ಗೆ ಚರ್ಚೆ ನಡೆಸಿ ಅನುಮೋದನೆ ಪಡೆಯಲಾಗುವುದು’ ಎಂದರು.

ADVERTISEMENT

‘ಯಾವುದೋ ಸಮುದಾಯವನ್ನು ಉದ್ದೇಶಿಸಿ ಮಸೂದೆ ತರುತ್ತಿಲ್ಲ. ಮತಾಂತರ ತಡೆಯಬೇಕೆಂಬ ಆಶಯವಷ್ಟೇ ನಮ್ಮ ಮುಂದಿರುವುದು. ಈ ವಿಷಯದಲ್ಲಿ ನಮ್ಮ ಬದ್ಧತೆ ಪ್ರದರ್ಶಿಸುತ್ತೇವೆ’ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.