ಬೆಂಗಳೂರು: ‘ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಉಡುಪಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಗಣಪತಿ ನಾಯ್ಕ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿ’ ಎಂದು ಹೈಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿದೆ.
‘ನನ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988 (ತಿದ್ದುಪಡಿ ಕಾಯ್ದೆ–2018) ಕಲಂ 7(ಎ)ರ ಅಡಿ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು’ ಎಂದು ಕೋರಿ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ತಾಳಮಕ್ಕಿಯ ಗಣಪತಿ ವಸಂತ್ ನಾಯ್ಕ ಸಲ್ಲಿಸಿರುವ ರಿಟ್ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಪ್ರಕರಣದ ತನಿಖೆಗೆ ಮಧ್ಯಂತರ ತಡೆ ನೀಡಬೇಕು’ ಎಂಬ ಅರ್ಜಿದಾರರ ಪರ ವಕೀಲರ ವಾದವನ್ನು ಒಪ್ಪದ ನ್ಯಾಯಪೀಠ, ಫಿರ್ಯಾದುದಾರ ಮತ್ತು ಲೋಕಾಯುಕ್ತ ವಿಶೇಷ ಪ್ರಾಸಿಕ್ಯೂಟರ್ ಅವರಿಗೆ ನೋಟಿಸ್ ಜಾರಿಗೊಳಿಸಿತು. ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಪ್ರಕರಣವೇನು?: ಉಡುಪಿಯ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ಗಣಪತಿ ನಾಯ್ಕ ಪ್ರಧಾನ ಸಿವಿಲ್ ನ್ಯಾಯಾಲಯದ ಉಸ್ತುವಾರಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದರು.
ಪ್ರಕರಣವೊಂದರಲ್ಲಿ ಅಕ್ರಮ ಮರಳು ಸಾಗಣೆಗೆ ಬಳಕೆ ಮಾಡಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿರುವ ವಿಚಾರಣೆ ಮುಂದುವರಿಸಲು ₹2 ಸಾವಿರ ಲಂಚ ಪಡೆದ ಆರೋಪದಡಿ ಲೋಕಾಯುಕ್ತ ಪೊಲೀಸರು ನಾಯ್ಕ ಅವರನ್ನು ಬಂಧಿಸಿದ್ದರು. ನಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.