ADVERTISEMENT

ಪದವಿ ಕೋರ್ಸ್‌ಗೆ ಆನ್‌ಲೈನ್‌ನಲ್ಲೇ ಅರ್ಜಿ

ಇದೇ 10 ರಿಂದ ಪ್ರವೇಶ ಪ್ರಕ್ರಿಯೆ ಶುರು

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 16:19 IST
Last Updated 4 ಜುಲೈ 2022, 16:19 IST
   

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ, ಅನುದಾನಿತ ಪದವಿ ಕಾಲೇಜುಗಳಲ್ಲಿನ ಕೋರ್ಸ್‌ಗಳ ಪ್ರವೇಶಕ್ಕಾಗಿ ಜುಲೈ 10 ರಿಂದ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಆರಂಭವಾಗಲಿದ್ದು, ವಿದ್ಯಾರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದರು.

ವಿದ್ಯಾರ್ಥಿಯು ಅಪೇಕ್ಷೆಪಡುವ ಪ್ರತಿಯೊಂದು ಕಾಲೇಜಿಗೆ ಪ್ರತ್ಯೇಕ ಅರ್ಜಿ ಸಲ್ಲಿಸಬೇಕಾಗಿಲ್ಲ. ಒಂದೇ ಲಾಗಿನ್‌ ಮೂಲಕ ಒಂದಕ್ಕಿಂತ ಹೆಚ್ಚು ಕಾಲೇಜುಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸದ್ಯವೇ ಕಾಲೇಜುಗಳ ವಾರ್ಷಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದಕ್ಕೆ ‘ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ’ (ಯುಯುಸಿಎಂಎಸ್‌) ಕರೆಯಲಾಗುತ್ತದೆ. ಇಲಾಖೆಯ ವೆಬ್‌ಸೈಟ್‌ನಲ್ಲಿ ಎಲ್ಲ ಕಾಲೇಜುಗಳು ಮತ್ತು ಕೋರ್ಸ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಲಭ್ಯವಿರಲಿದೆ. ಬಹುತೇಕ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಸಂಪೂರ್ಣ ಮಾಹಿತಿಯನ್ನು ಅಪ್‌ಲೋಡ್‌ ಮಾಡಿವೆ. ಮೂರು ವಿಶ್ವವಿದ್ಯಾಲಯಗಳು ಮಂಗಳವಾರ ಮಾಹಿತಿ ಅಪ್‌ಲೋಡ್‌ ಮಾಡುವ ಪ್ರಕ್ರಿಯೆ ಪೂರ್ಣಗೊಳಿಸಲಿವೆ ಎಂದರು.

ADVERTISEMENT

ಕಾಲೇಜು ಸೇರಬಯಸುವ ವಿದ್ಯಾರ್ಥಿ ತನ್ನ ಪಿಯುಸಿ ನೋಂದಣಿ ಸಂಖ್ಯೆಯನ್ನು ದಾಖಲಿಸಿದರೆ, ಆತನ ಸಂಪೂರ್ಣ ಮಾಹಿತಿ ಸಿಗುತ್ತದೆ. ಆತನ ಹೆಸರು, ಪೋಷಕರ ಹೆಸರು, ಆಧಾರ್‌, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಪ್ರಮುಖವಾದವು ಎಂದು ಅಶ್ವತ್ಥನಾರಾಯಣ ಹೇಳಿದರು. ಅರ್ಜಿ www.uucms.Karnataka.gov.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.