ADVERTISEMENT

ಕೋವಿಡ್ ಚಿಕಿತ್ಸೆ ಮೇಲ್ವಿಚಾರಣೆಗೆ ಸಮಿತಿ ನೇಮಿಸಿ: ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 5:11 IST
Last Updated 18 ಏಪ್ರಿಲ್ 2021, 5:11 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೋವಿಡ್ ಸೋಂಕಿತರ ಚಿಕಿತ್ಸೆಯ ಮೇಲ್ವಿಚಾರಣೆಗೆ ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್‌ ತಿಳಿಸಿದೆ.

‘ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆ ಕೊಡಿಸಲು ಮತ್ತು ಜನರ ಕುಂದು–ಕೊರತೆ ವಿಚಾರಿಸಲು ಇದರಿಂದ ಅನುಕೂಲವಾಗುತ್ತದೆ. ಈ ರೀತಿಯ ಸಮಿತಿಯೊಂದನ್ನು ನೇಮಿಸಿದರೆ ಸರ್ಕಾರದ ಆಡಳಿತಾತ್ಮಕ ಕ್ರಮಗಳ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಲಿದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ, ನಿವೃತ್ತ ಪೊಲೀಸ್ ಮಹಾನಿರ್ದೇಶಕರನ್ನು ಒಳಗೊಂಡ ಸಮಿತಿ ರಚಿಸುವುದು ಸೂಕ್ತ ಎಂದು ಹೇಳಿದೆ.

ADVERTISEMENT

‘ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 10 ಸಾವಿರ ದಾಟಿದೆ. ದೊಡ್ಡಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಉಪಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಫಲಿತಾಂಶದ ದಿನ ಕೋವಿಡ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆ ಆಗುವಂತೆ ನೋಡಿಕೊಳ್ಳಬೇಕು’ ಎಂದು ಪೀಠ ತಿಳಿಸಿತು.

ರೆಮ್‌ಡಿಸಿವಿರ್ ಕೊರತೆ ಇಲ್ಲ: ‘ರಾಜ್ಯದಲ್ಲಿ ರೆಮ್‌ಡಿಸಿವಿರ್ ಕೊರತೆ ಇಲ್ಲ. ವಿವಿಧ ಹಂತಗಳಲ್ಲಿ 35,821 ಬಾಟಲಿಗಳು ಲಭ್ಯವಿದ್ದು, ಹೆಚ್ಚುವರಿಯಾಗಿ 70 ಸಾವಿರ ಬಾಟಲಿ ತರಿಸಲಾಗುತ್ತಿದೆ. ಜನವರಿ 1ರಿಂದ ಈವರೆಗೆ 55 ಸಾವಿರ ಬಾಟಲಿಗಳನ್ನು ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ’ ಎಂದು ಹೈಕೋರ್ಟ್‌ಗೆ ಸರ್ಕಾರ ಮಾಹಿತಿ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.