ಬೆಂಗಳೂರು: ಅಧಿಕಾರಿಗಳು, ನೌಕರರನ್ನು ನಿಂದಿಸುವ ಹಾಗೂ ಅವರ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಒತ್ತಾಯಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಈ ಕುರಿತು ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.
ಕಾಂಗ್ರೆಸ್ ಆಡಳಿತದಲ್ಲಿ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ. ಅಧಿಕಾರಿಗಳು ಮತ್ತು ನೌಕರರಿಗೆ ಕರ್ತವ್ಯ ನಿರ್ವಹಿಸಲು ಬಿಡಬೇಕು. ಇವರಿಗೆ ಅಡ್ಡಿಪಡಿಸುವುದು, ಬೆದರಿಕೆ ಒಡ್ಡುವುದು ಮತ್ತು ನಿಂದಿಸುವವರನ್ನು ರಕ್ಷಿಸುವ ಕೆಲಸ ಮಾಡಬಾರದು ಎಂದು ಅಶೋಕ ಸೂಚಿಸಿದರು.
‘ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಗೌಡ ಅವರನ್ನು ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ಅವಾಚ್ಯ ಪದಗಳಿಂದ ನಿಂದಿಸಿದ್ದರೂ ಸಚಿವ ಕೆ.ಎಚ್.ಮುನಿಯಪ್ಪ ಅವರು ಆತ ಒಳ್ಳೆಯ ವ್ಯಕ್ತಿ ಎಂದು ಹೇಳಿದ್ದಾರೆ. ಕಳೆದೆರಡು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪುಂಡರು ಸರ್ಕಾರಿ ಕಚೇರಿಗಳನ್ನು ಪಕ್ಷದ ಕಚೇರಿ ಮಾಡಿಕೊಂಡಿದ್ದಾರೆ. ಅಧಿಕಾರಿಗಳನ್ನು ರಕ್ಷಿಸುವುದು ನಿಮ್ಮ ಕರ್ತವ್ಯವೆಂದು ಅವರಿಗೆ ಹೇಳಿದ್ದೇನೆ’ ಎಂದರು.
‘ಪಿಎಸ್‌ಐ ಪರಶುರಾಮ್, ನೌಕರ ರುದ್ರಣ್ಣ, ಗ್ರಂಥಪಾಲಕಿ ಭಾಗ್ಯವತಿ ಪ್ರಕರಣಗಳು, ಮಾಗಡಿ ಶಾಸಕ ಬಾಲಕೃಷ್ಣ ತಹಶೀಲ್ದಾರ್‌ಗೆ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿರುವುದೂ ಸೇರಿ, ಹಲವು ಘಟನೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ವಹಿಸಿಲ್ಲ. ಅಧಿಕಾರಿಗಳು ಒಂದೋ ಪ್ರತಿಭಟನೆ ನಡೆಸಬೇಕು, ಇಲ್ಲವಾದರೆ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ರಾಜ್ಯದಲ್ಲಿದೆ’ ಎಂದರು.
‘ಅಧಿಕಾರಿ ಮೇಲೆ ಯಾರಾದರೂ ಹಲ್ಲೆ ಮಾಡಿದರೆ ಮಾಧ್ಯಮಗಳ ಬಳಿ ಹೋಗಬಾರದು ಎಂದೇನಿಲ್ಲ. ಸರ್ಕಾರದ ಮೇಲೆ ನಂಬಿಕೆ ಇಲ್ಲದ ಅಧಿಕಾರಿಗಳು ಮಾಧ್ಯಮಗಳ ಬಳಿ ಹೋದರೆ ಅದರಲ್ಲಿ ತಪ್ಪಿಲ್ಲ. ಶಾಸಕ ಸಿ.ಟಿ.ರವಿ ಅವರ ಪ್ರಕರಣದಲ್ಲಿ ಅವರನ್ನು ಬಂಧಿಸಿ ಕಾಡು ಸುತ್ತಿಸಿದ್ದರು. ಆದರೆ, ಶಿಡ್ಲಘಟ್ಟ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಏಕೆ’ ಎಂದು ಪ್ರಶ್ನಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.