ADVERTISEMENT

ಮೌಲ್ಯಮಾಪನ ಅರ್ಜಿ: ಶೀಘ್ರ ವಿಲೇವಾರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2023, 19:45 IST
Last Updated 7 ಮಾರ್ಚ್ 2023, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘2022–2023ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳ ಮೌಲ್ಯಮಾಪನ ವಿಧಾನವನ್ನು ಬದಲಾಯಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಪ್ರಶ್ನಿಸಲಾದ ಅರ್ಜಿಯನ್ನು
ಶೀಘ್ರವೇ ವಿಲೇವಾರಿ ಮಾಡಿ’ ಎಂದು ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠಕ್ಕೆ ವಿಭಾಗೀಯ ನ್ಯಾಯಪೀಠವು ಮನವಿ ಮಾಡಿದೆ.

ಈ ಸಂಬಂಧ, ‘ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಒಕ್ಕೂಟ’ ಮತ್ತು ‘ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘ’ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ಇದೇ 13 ರಂದು 5 ಮತ್ತು 8ನೇ ತರಗತಿಗಳ ಪರೀಕ್ಷೆಗಳು ನಡೆಯಲಿದ್ದು ಅರ್ಜಿಗಳನ್ನು ಶೀಘ್ರ ವಿಚಾರಣೆ ನಡೆಸಬೇಕಾದ ಅಗತ್ಯವಿದೆ’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಿಲೇವಾರಿ ಮಾಡಿದೆ.

ಪ್ರಕರಣವೇನು?: 2022-23 ನೇ ಶೈಕ್ಷಣಿಕ ಸಾಲಿನಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 2022ರ ಡಿಸೆಂಬರ್ 12 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಕ್ರಮವನ್ನು ಅರ್ಜಿದಾರರು ಪ್ರಶ್ನಿಸಿದ್ದರು.

ADVERTISEMENT

ಈ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ ಮಧ್ಯಂತರ ಮನವಿಯನ್ನು ತಿರಸ್ಕರಿಸಿತ್ತು. ‘ಸರ್ಕಾರದ ಸುತ್ತೋಲೆಯ ಪ್ರಕಾರ ಈ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದರೂ ಅದೇ ತರಗತಿಗಳಲ್ಲಿ ಮುಂದುವರೆಸಬೇಕು ಎನ್ನುವ ನಿಯಮ ಇಲ್ಲ. ಸರ್ಕಾರ ಜಾರಿ ಮಾಡಲು ಮುಂದಾಗಿರುವ ನಿಯಮದಲ್ಲಿ ಶಿಕ್ಷಣ ಹಕ್ಕು ಕಾಯ್ದೆ ಉಲ್ಲಂಘನೆಯಾಗಿಲ್ಲ’ ಎಂಬ ಅಭಿಪ್ರಾಯದೊಂದಿಗೆ ಮಧ್ಯಂತರ ಆದೇಶ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಮೇಲ್ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.