ಶಾಲಿನಿ ರಜನೀಶ್
ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಚುನಾವಣಾ ಕಾರ್ಯಗಳಿಗೆ ಶಿಕ್ಷಕರನ್ನು ನೇಮಕ ಮಾಡುತ್ತಿರುವ ವಿಷಯವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ, ಭಾರತ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆ ನಿರ್ಧರಿಸಿದೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಜತೆ ಮಂಗಳವಾರ ನಡೆದ ಸಭೆಯಲ್ಲಿ ಈ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಬಾರದು ಎಂದು ಕೋರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ರಾಜ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದರು. ಆದರೆ, ಅವರ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕರ್ನಾಟಕದ ಜಂಟಿ ಮುಖ್ಯ ಚುನಾವಣಾಧಿಕಾರಿ ಎಸ್. ಯೋಗೇಶ್ವರ, ‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರನ್ನು ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಹಿಂಪಡೆಯಬೇಕು ಎಂಬ ಕೋರಿಕೆ ಪರಿಗಣಿಸಲು ಸಾಧ್ಯವಿಲ್ಲ. ರಜಾ ದಿನಗಳು ಹಾಗೂ ಬೋಧಕೇತರ ಸಮಯದಲ್ಲಿ ಬೋಧಕ ಸಿಬ್ಬಂದಿಯನ್ನು ಚುನಾವಣಾ ಕಾರ್ಯ, ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯಕ್ಕೆ ನಿಯೋಜನೆ ಮಾಡಲು ಸುಪ್ರೀಂಕೋರ್ಟ್ ಸಹ ಸಮ್ಮತಿಸಿದೆ. ಭಾರತ ಚುನಾವಣಾ ಅಯೋಗವೂ ಈ ಕುರಿತು ಸುತ್ತೋಲೆ ಹೊರಡಿಸಿದೆ’ ಎಂದು ಪ್ರತಿಕ್ರಿಯೆ ನೀಡಿದ್ದರು.
ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ‘ಚುನಾವಣಾ ಕಾರ್ಯಗಳಿಗಾಗಿ ಶಿಕ್ಷಕರನ್ನು ಬೂತ್‌ಮಟ್ಟದ ಅಧಿಕಾರಿಗಳಾಗಿ (ಬಿಎಲ್‌ಒ) ನೇಮಕ ಮಾಡುವುದರಿಂದ ತರಗತಿ ಪಾಠಗಳಿಗೆ ತೊಂದರೆಯಾಗುತ್ತಿದೆ. ಶಿಕ್ಷಕರನ್ನು ಬೋಧನಾ ಕಾರ್ಯ ಹೊರತುಪಡಿಸಿ, ಅನ್ಯ ಕಾರ್ಯಗಳಿಗೆ ಬಳಸಬಾರದು. ಈ ಕುರಿತು ಭಾರತ ಚುನಾವಣಾ ಆಯೋಗಕ್ಕೆ ಪತ್ರ ಬರೆಯಬೇಕು’ ಎಂದು ಕೋರಿದರು.
ನಲಿಕಲಿ ಪದ್ಧತಿ ರದ್ದುಗೊಳಿಸಿ, ಸಾಮಾನ್ಯ ಶಿಕ್ಷಣ ಪದ್ಧತಿಯನ್ನು ಜಾರಿಗೊಳಿಸುವುದು, ಮುಖ್ಯ ಶಿಕ್ಷಕರ ಕಾರ್ಯಭಾರದ ಒತ್ತಡ ಕಡಿಮೆ ಮಾಡುವುದು, ಒಂದನೇ ತರಗತಿಯಿಂದಲೇ ಎನ್‌ಸಿಇಆರ್‌ಟಿ ಪಠ್ಯಕ್ರಮ ಅಳವಡಿಸಿಕೊಳ್ಳುವುದು, ಒಂದನೇ ಸೆಮಿಷ್ಟರ್ ಅವಧಿಯಲ್ಲಿ ಪ್ರತಿಭಾಕಾರಂಜಿ ಹಾಗೂ ಎರಡನೇ ಸೆಮಿಷ್ಟರ್ ಅವಧಿಯಲ್ಲಿ ಕ್ರೀಡಾಕೂಟಗಳನ್ನು ಆಯೋಜನೆ ಮಾಡುವ ಕುರಿತು ಚರ್ಚಿಸಲಾಯಿತು.
ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಆಯುಕ್ತ ಡಾ.ತ್ರಿಲೋಕಚಂದ್ರ, ಸಂಘದ ಅಧ್ಯಕ್ಷ ಕೆ. ನಾಗೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.