ADVERTISEMENT

ಪಾದರಾಯನಪುರ ಘಟನೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಎಚ್.ಡಿ. ಕುಮಾರಸ್ವಾಮಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2020, 5:01 IST
Last Updated 20 ಏಪ್ರಿಲ್ 2020, 5:01 IST
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್‌ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ 'ಬಲಿ' ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕೊರೊನಾ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.