ADVERTISEMENT

ಪಟಾಕಿ ದುರಂತ | ಉನ್ನತ ಮಟ್ಟದ ತನಿಖೆಗೆ ಸರ್ಕಾರ ಆದೇಶಿಸಬೇಕು: ಕುಮಾರಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಅಕ್ಟೋಬರ್ 2023, 6:12 IST
Last Updated 8 ಅಕ್ಟೋಬರ್ 2023, 6:12 IST
<div class="paragraphs"><p>ಎಚ್‌.ಡಿ ಕುಮಾರಸ್ವಾಮಿ</p></div>

ಎಚ್‌.ಡಿ ಕುಮಾರಸ್ವಾಮಿ

   

ಬೆಂಗಳೂರು: ಆನೇಕಲ್‌ ತಾಲ್ಲೂಕಿನ ಅತ್ತಿಬೆಲೆ ಪಟಾಕಿ ದುರಂತದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಘಟನೆ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ADVERTISEMENT

ಜೀವ ಕಳೆದುಕೊಂಡ ಎಲ್ಲಾ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು. ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲಬೇಕು ಎಂದು ಕುಮಾರಸ್ವಾಮಿ ಅವರು ಆಗ್ರಹಿಸಿದರು.

ಅತ್ತಿಬೆಲೆಯ ದುರಂತ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು, ದುರಂತದ ಕಾರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ, ನೋವಿನಲ್ಲಿರುವ ಕುಟುಂಬದ ಜೊತೆ ನಾವಿದ್ದೇವೆ ಎಂದು ತಿಳಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.