ADVERTISEMENT

ವಿಧಾನ ಪರಿಷತ್ ಕಲಾಪ: ಸರ್ಕಾರದ ವಿರುದ್ಧ ಧರಣಿ ಆರಂಭಿಸಿದ ಆಯನೂರು ಮಂಜುನಾಥ್

ಅತಿಥಿ ಉಪನ್ಯಾಸಕರಿಗೆ ವೇತನ ನೀಡಲು ವಿಧಾನ ಪರಿಷತ್ ಶೂನ್ಯ ವೇಳೆಯಲ್ಲಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 7:44 IST
Last Updated 22 ಸೆಪ್ಟೆಂಬರ್ 2020, 7:44 IST
ಆಯನೂರು ಮಂಜುನಾಥ್
ಆಯನೂರು ಮಂಜುನಾಥ್   

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ವೇತನ ನೀಡುವ ವಿಚಾರದಲ್ಲಿ ಶಿಕ್ಷಣ ಸಚಿವರು ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ವಿಧಾನ ಪರಿಷತ್‌ನಲ್ಲಿ ಧರಣಿ ಆರಂಭಿಸಿದ್ದಾರೆ. ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಬೆಂಬಲಿಸಿದ್ದಾರೆ.

ಮಂಗಳವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಆಯನೂರು ಮಂಜುನಾಥ್, 'ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸುವಂತೆ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ, ರಾಜ್ಯದಲ್ಲಿ ಯಾವುದೇ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಿಲ್ಲ.‌ಲಾಕ್ ಡೌನ್ ಆರಂಭದಲ್ಲೇ ಅತಿಥಿ ಉಪನ್ಯಾಸಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿತ್ತು ಎಂದು ಶಿಕ್ಷಣ ಸಚಿವರು ಸದನಕ್ಕೆ ಸುಳ್ಳು ಹೇಳಿದ್ದಾರೆ' ಎಂದು ಆರೋಪಿಸಿದರು.

ಆರ್ಥಿಕ ಮುಗ್ಗಟ್ಟಿನಿಂದ ಹಲವು ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಬೇಕು. ರಾಜ್ಯದ ಎಲ್ಲ ಅತಿಥಿ ಉಪನ್ಯಾಸಕರಿಗೆ ತಕ್ಷಣ ವೇತನ ಪಾವತಿ ಮಾಡಬೇಕು ಎಂದು ಆಗ್ರಹಿಸಿದರು.

ADVERTISEMENT

ಉನ್ನತ ಶಿಕ್ಷಣ ಸಚಿವರಿಂದ ಬುಧವಾರ ಉತ್ತರ ಒದಗಿಸುವುದಾಗಿ ಸಭಾ ನಾಯಮ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ಅದನ್ನು ಒಪ್ಪದ ಆಯನೂರು‌ ಮಂಜುನಾಥ್ ಸಭಾಪತಿಯವರ ಪೀಠದ ಎದುರು ಧರಣಿ ಆರಂಭಿಸಿದರು. ಕಾಂಗ್ರೆಸ್, ಜೆಡಿಎಸ್ ಸದಸ್ಯರೂ ಧರಣಿಗೆ ಇಳಿದರು.

ಧರಣಿ ವಾಪಸ್ ಪಡೆಯುವಂತೆ ಮನವೊಲಿಸಲು ಸಚಿವರು ನಡೆಸಿದ ಪ್ರಯತ್ನ ಸಫಲವಾಗಲಿಲ್ಲ. ಸಭಾಪತಿಯವರು 20 ನಿಮಿಷಗಳ ಕಾಲ ಕಲಾಪ‌ ಮುಂದೂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.