ಎಚ್.ಡಿ.ದೇವೇಗೌಡ (ಸಂಗ್ರಹ ಚಿತ್ರ)
ನವದೆಹಲಿ: ‘ಆಯುಷ್ಮಾನ್ ಭಾರತ್ ಕಾರ್ಯಕ್ರಮದಡಿಯಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುವಿಗೆ ಚಿಕಿತ್ಸೆ ನೀಡಲು ರಾಷ್ಟ್ರವ್ಯಾಪಿ ಯೋಜನೆ ರೂಪಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಮನವಿ ಮಾಡಿದರು.
ರಾಜ್ಯಸಭೆಯಲ್ಲಿ ಬುಧವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೇಡಿಕೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ದೇಶದಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯುವಿನಿಂದ ಮರಣ ಹೊಂದುವವರು ಹೆಚ್ಚುತ್ತಿದ್ದಾರೆ. ಪ್ರತಿ ವರ್ಷ ನಾವು ಲಕ್ಷಾಂತರ ಜನರನ್ನು ಕಳೆದುಕೊಳ್ಳುತ್ತಿದ್ದೇವೆ. ದುರದೃಷ್ಟವಶಾತ್ ಶೇ 30ರಷ್ಟು ಹೃದಯಾಘಾತಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳಲ್ಲಿ ಸಂಭವಿಸುತ್ತವೆ’ ಎಂದು ಅವರು ಕಳವಳ ವ್ಯಕ್ತಪಡಿಸಿದರು.
‘ಗ್ರಾಮೀಣ ಪ್ರದೇಶದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ತಾಲ್ಲೂಕು ಆಸ್ಪತ್ರೆಗಳಲ್ಲಿ ₹18,000ಕ್ಕೆ ರಕ್ತ ಹೆಪ್ಪುಗಟ್ಟುವಿಕೆ ಕರಗಿಸುವ ಇಂಜೆಕ್ಷನ್‌ಗಳು ಲಭ್ಯವಾಗುವಂತೆ ಮಾಡಬೇಕು. ಹೀಗೆ ಮಾಡುವುದರಿಂದ ಗೋಲ್ಡನ್ ಅವರ್‌ನಲ್ಲಿ ಜೀವಗಳನ್ನು ಉಳಿಸಬಹುದು. ಆರಂಭಿಕವಾಗಿ ಆಯುಷ್ಮಾನ್ ಭಾರತ್ ಅಡಿಯಲ್ಲಿ ಆಂಜಿಯೋಪ್ಲಾಸ್ಟಿ ಮತ್ತು ಸ್ಟೆಂಟ್ ಅಳವಡಿಸುವುದಕ್ಕಾಗಿ ರೋಗಿಗಳನ್ನು ಹತ್ತಿರದ ನಗರಗಳಿಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಬೇಕು’ ಎಂದು ಅವರು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವ ಎಂಬಿಬಿಎಸ್ ವೈದ್ಯರ ವೇತನ ಹೆಚ್ಚಳ ಮಾಡಬೇಕು. ಗ್ರಾಮೀಣ ವೈದ್ಯರು ಪ್ರಸ್ತುತ ತಿಂಗಳಿಗೆ ₹50,000-60,000 ವೇತನ ಪಡೆಯುತ್ತಿದ್ದಾರೆ. ಕಡಿಮೆ ಸಂಬಳದಿಂದಾಗಿ ವೈದ್ಯರು ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿಲ್ಲ. ಪಿಎಚ್‌ಸಿಗಳು, ಸಿಎಚ್‌ಸಿಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಿಗೆ ಹೆಚ್ಚಿನ ವೃತ್ತಿಪರರನ್ನು ಆಕರ್ಷಿಸಲು ವೇತನವನ್ನು ಕನಿಷ್ಠ ₹80,000-90,000ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮತ್ತು ದಾದಿಯರ ವೇತನ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.
ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ರಾಷ್ಟ್ರೀಯ ರೋಗನಿರೋಧಕ ಕಾರ್ಯಕ್ರಮದಲ್ಲಿ ಎಚ್‌ಪಿವಿ ಲಸಿಕೆಯನ್ನು ಸೇರಿಸಬೇಕೆಂದು ದೇವೇಗೌಡರು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.