
ಬೆಂಗಳೂರು: ‘ಶೋಷಿತರ ಜಾಗೃತಿಗಾಗಿ ಚಿತ್ರದುರ್ಗದಲ್ಲಿ ಇದೇ 28ರಂದು ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಶೋಷಿತ ಸಮುದಾಯದ ಸಚಿವರು, ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ’ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ತಿಳಿಸಿದೆ.
‘ಸಮಾವೇಶದಲ್ಲಿ ದಲಿತ, ಹಿಂದುಳಿದ, ಅಲೆಮಾರಿ, ಆದಿವಾಸಿ, ಅಲ್ಪಸಂಖ್ಯಾತರು ಮತ್ತು ಜನಪರ ಸಂಘಟನೆಗಳ 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ’ ಎಂದೂ ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ, ಸಂಚಾಲಕರಾದ ಮಾವಳ್ಳಿ ಶಂಕರ್, ಎಣ್ಣೆಗೆರೆ ಆರ್. ವೆಂಕಟರಾಮಯ್ಯ ತಿಳಿಸಿದ್ದಾರೆ.
‘ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಎಚ್. ಕಾಂತರಾಜ ಅವರ ಅವಧಿಯಲ್ಲಿ ರಾಜ್ಯದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು ಸ್ವೀಕರಿಸಿ, ಸಾರ್ವಜನಿಕ ಚರ್ಚೆಗೆ ಬಿಟ್ಟು ಅಂಗೀಕರಿಸಬೇಕು ಸೇರಿದಂತೆ 12 ಹಕ್ಕೊತ್ತಾಯಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು’ ಎಂದು ಅವರು ಹೇಳಿದ್ದಾರೆ.
‘ಕೇಂದ್ರ ಸರ್ಕಾರ ದೇಶದಾದ್ಯಂತ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು, ಆರ್ಥಿಕ ದುರ್ಬಲ ವರ್ಗದವರಿಗೆ ಜಾರಿಗೊಳಿಸಿರುವ ಶೇ 10 ಮೀಸಲಾತಿಯನ್ನು ರದ್ದುಗೊಳಿಸಬೇಕು, ಎಸ್‌ಸಿ, ಎಸ್‌ಟಿ, ಒಬಿಸಿ ಆದಾಯ ಮಿತಿ ಹೆಚ್ಚಿಸಬೇಕು, ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆ ಜಾರಿ ಮಾಡಬೇಕು, ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ರಾಜಕೀಯ ಮೀಸಲಾತಿ ನೀಡುವ ಕಾನೂನು ರೂಪಿಸಬೇಕು, ಎಸ್‌ಸಿ, ಎಸ್‌ಟಿ ಜನಸಂಖ್ಯೆಗೆ ಅನುಗುಣವಾಗಿ ಖಾಸಗಿ ಕ್ಷೇತ್ರದಲ್ಲೂ ಮೀಸಲಾತಿ ಹೆಚ್ಚಿಸಬೇಕು ಮುಂತಾದ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.