ಸಿದ್ದರಾಮಯ್ಯ
ಬೆಂಗಳೂರು: 'ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದಕ್ಕೆ ಮಾರಕವಾಗಿದ್ದು ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಚರ್ಚಿಸಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ, ದುಷ್ಕೃತ್ಯ ಎಸಗಿದ ಪುಂಡರಿಗೆ ಕಾನೂನಿನ ಮೂಲಕ ತಕ್ಕ ಉತ್ತರ ನೀಡುವಂತೆ ಸೂಚನೆ ನೀಡಿದ್ದೇನೆ' ಎಂದು ಹೇಳಿದ್ದಾರೆ.
'ಈಗಾಗಲೇ ಪ್ರಕರಣದ ಸಂಬಂಧ ಕೆಲವು ಆರೋಪಿಗಳನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ಶಿಕ್ಷೆ ನಿಶ್ಚಿತ' ಎಂದು ಹೇಳಿದ್ದಾರೆ.
'ನಾಡಿನ ಜನರಿಗೆ ಭಯಮುಕ್ತ ನೆಮ್ಮದಿಯ ಬದುಕು ನೀಡುವುದು ನಮ್ಮ ಮೊದಲ ಆದ್ಯತೆ. ಜನರ ಶಾಂತಿ-ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ-ಶಕ್ತಿಗಳನ್ನು ನಾವು ಸಹಿಸುವುದಿಲ್ಲ' ಎಂದು ತಿಳಿಸಿದ್ದಾರೆ.
'ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೂ ಕಿವಿಗೊಡದೆ, ಸಂಯಮದಿಂದ ವರ್ತಿಸಲು ಮನವಿ ಮಾಡಿದ್ದು, ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ಮಾಡಲಿದೆ' ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.