ADVERTISEMENT

6 ತಿಂಗಳಲ್ಲಿ ಬಗರ್‌ಹುಕುಂ ಅರ್ಜಿ ವಿಲೇವಾರಿ

ಜಿಲ್ಲಾಧಿಕಾರಿಗಳಿಗೆ ಗಡುವು ನೀಡಿದ ಸಚಿವ ಕೃಷ್ಣ ಬೈರೇಗೌಡ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2023, 16:27 IST
Last Updated 9 ಅಕ್ಟೋಬರ್ 2023, 16:27 IST

ಬೆಂಗಳೂರು: ಅಕ್ರಮ– ಸಕ್ರಮ ಯೋಜನೆಯಡಿ ನಮೂನೆ 50, 53 ಮತ್ತು 57ರ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಆರು ತಿಂಗಳೊಳಗೆ ಸಂಪೂರ್ಣ ವಿಲೇವಾರಿ ಮಾಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಸೋಮವಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, 'ಯಾವುದೇ ಅರ್ಜಿ ಇತ್ಯರ್ಥವಾಗದೇ ಬಾಕಿ ಉಳಿಯಬಾರದು ಮತ್ತು ಅರ್ಹ ಫಲಾನುಭವಿಗಳಿಗೆ ಸಾಗುವಳಿ ಚೀಟಿ ನೀಡಬೇಕು' ಎಂದು ಕಟ್ಟುನಿಟ್ಟಾಗಿ ಹೇಳಿದರು.

ಬಗರ್‌ಹುಕುಂ ಅರ್ಜಿಗಳು ವಿಲೇವಾರಿಯಾಗದ ವಿಚಾರವನ್ನು ಪ್ರಸ್ತಾಪಿಸಿದ ಸಚಿವರು, ಅರ್ಜಿ ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಸಕ್ರಮಕ್ಕೆ ಕೋರಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಈ ಅರ್ಜಿಗಳು ವಿಲೇವಾರಿ ಆಗದ ಕಾರಣ ರೈತರು ದಿನವೂ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ಆದ್ದರಿಂದ ಎಲ್ಲಾ ಅರ್ಜಿಗಳನ್ನು ಆರು ತಿಂಗಳೊಳಗೆ ವಿಲೇವಾರಿ ಮಾಡಬೇಕು ಎಂದು ತಾಕೀತು ಮಾಡಿದರು.

ADVERTISEMENT

‘ಅರ್ಜಿಗಳ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಪ್ರಭಾವಿಗಳು ಮತ್ತು ರಾಜಕೀಯ ಪಕ್ಷಗಳ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು. ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ಜನ ಸಾಕಷ್ಟು ನಿರೀಕ್ಷೆಗಳೊಂದಿಗೆ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ನೀಡಿದ್ದು, ಆ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು’ ಎಂದು ಸಚಿವರು ಹೇಳಿದರು.

‘ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಸಾಗುವಳಿ ಚೀಟಿ ನೀಡುವುದು ಕಷ್ಟ. ಸಾವಿರಾರು ಎಕರೆ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಪ್ರದೇಶಕ್ಕೂ ಅಧಿಕಾರಿಗಳು ಹೋಗಿ ಕೃಷಿ ನಡೆಯುತ್ತಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವುದು ಕಷ್ಟ’ ಎಂದು ಅವರು ಅಭಿಪ್ರಾಯಪಟ್ಟರು.

ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಉಪಗ್ರಹ ಆಧಾರಿತ ಚಿತ್ರ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯ ಸಮ್ಮತವಾಗುತ್ತದೆ. ಅಲ್ಲದೇ, ಪ್ರಕ್ರಿಯೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ‘ಆ್ಯಪ್‌’ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.