ADVERTISEMENT

ಬಳ್ಳಾರಿ ಗಲಾಟೆ: ನ್ಯಾಯಾಂಗ ತನಿಖೆಗೆ ಬಿಜೆ‍ಪಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 16:17 IST
Last Updated 2 ಜನವರಿ 2026, 16:17 IST
ಆರ್‌.ಅಶೋಕ
ಆರ್‌.ಅಶೋಕ   

ಬೆಂಗಳೂರು: ಬಳ್ಳಾರಿಯಲ್ಲಿ ಗಲಾಟೆ ಮತ್ತು ಗುಂಡೇಟಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಆಂಧ್ರ ಪ್ರದೇಶ ಸ್ವರೂಪ ರಕ್ತ ಚರಿತ್ರೆ ಆರಂಭವಾಗಿದೆ. ಕಾಂಗ್ರೆಸ್‌ ಕಾರ್ಯಕರ್ತರು ಬೇಕೆಂದಲೇ ಜನಾರ್ದನ ರೆಡ್ಡಿ ಅವರ ಮನೆಯ ಆವರಣದಲ್ಲಿ ಫ್ಲೆಕ್ಸ್‌ಗಳನ್ನು ಹಾಕಿದ್ದಾರೆ. ಈ ಬಗ್ಗೆ ಜನಾರ್ದನ ರೆಡ್ಡಿ ದೂರು ನೀಡಿದ್ದು, ಪೊಲೀಸರು ಬಂದು ಫ್ಲೆಕ್ಸ್‌ ತೆರವು ಮಾಡಿದ್ದಾರೆ’ ಎಂದರು.

‘ಇದನ್ನೇ ನೆಪ ಮಾಡಿಕೊಂಡು ಶಾಸಕ ನಾರಾ ಭರತ್ ರೆಡ್ಡಿ ಅವರ ಬೆಂಬಲಿಗರು ಜನಾರ್ದನ ರೆಡ್ಡಿ ಅವರ ಮನೆಗೆ ನುಗ್ಗಿ ದಾಂದಲೆ ನಡೆಸಿದ್ದಾರೆ. ತಪ್ಪಿತಸ್ಥ ಭರತ್‌ ರೆಡ್ಡಿ ವಿರುದ್ಧ ಕ್ರಮ ತೆಗೆದುಕೊಳ್ಳುವ ಬದಲಿಗೆ ಪೊಲೀಸರು, ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತಪ್ಪಿತಸ್ಥರನ್ನು ಪತ್ತೆ ಮಾಡಿ, ಶಿಕ್ಷೆ ನೀಡುವ ಸಲುವಾಗಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ‘ರಾಜ್ಯದಲ್ಲಿ ಹೊಸ ವರ್ಷವು ರಕ್ತಸಿಕ್ತ ಅಧ್ಯಾಯದೊಂದಿಗೆ ಆರಂಭವಾಗಿದೆ. ಅದಕ್ಕೆ ಕಾರಣರಾದವರ ಪರವಾಗಿ ಸರ್ಕಾರ ನಿಂತಿದೆ. ಶಾಸಕ ಭರತ್‌ ರೆಡ್ಡಿ ಮತ್ತು ಬೆಂಬಲಿಗರನ್ನು ಬಂಧಿಸುವ ಬದಲಿಗೆ, ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿದ್ದು ಏಕೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.