ಬೆಂಗಳೂರು: ‘ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಕಡ್ಡಾಯಗೊಳಿಸುವ ಉದ್ದೇಶದಿಂದ ಕಾನೂನು ತಿದ್ದುಪಡಿ ಮಾಡಿ ನಿಯಮಗಳನ್ನು ರಚಿಸಲು ನಿರ್ಧರಿಸಿದ್ದೇವೆ. ಸಚಿವ ಸಂಪುಟ ಒಪ್ಪಿದರೆ ಸುಗ್ರೀವಾಜ್ಞೆ ಹೊರಡಿಸುತ್ತೇವೆ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.
ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಕಾಯ್ದೆಗಳ ತಿದ್ದುಪಡಿಗೆ ಕರಡು ಮಸೂದೆ ಸಿದ್ಧವಾಗಿದೆ. ಇದೇ 11ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಚರ್ಚೆ ಮಾಡುತ್ತೇವೆ’ ಎಂದರು.
‘ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡುವ ವಿಶ್ವಾಸವಿದೆ’ ಎಂದ ಅವರು, ‘ಮತಪತ್ರ ಕಡ್ಡಾಯಗೊಳಿಸುವುದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಆಗುವುದಿಲ್ಲ. ಆ ಉದ್ದೇಶವೂ ಸರ್ಕಾರಕ್ಕೆ ಇಲ್ಲ’ ಎಂದರು.
ಮದ್ದೂರು ಗಲಭೆಯ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯವರು ಧರ್ಮ ಸಂಘರ್ಷ ಉಂಟು ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದಾರೆ’ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.