ADVERTISEMENT

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಪ್ರಿಯಕೃಷ್ಣ ಕಣಕ್ಕೆ?

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2024, 23:30 IST
Last Updated 17 ಮಾರ್ಚ್ 2024, 23:30 IST
ಪ್ರಿಯಕೃಷ್ಣ
ಪ್ರಿಯಕೃಷ್ಣ   

ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೋವಿಂದರಾಜನಗರ ಕ್ಷೇತ್ರ ಶಾಸಕ ಪ್ರಿಯಕೃಷ್ಣ ಅವರನ್ನೇ ಕಣಕ್ಕಿಳಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ ಎಂದು ಗೊತ್ತಾಗಿದೆ.

ಈ ಕ್ಷೇತ್ರದಿಂದ ಉಡುಪಿ– ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಪ್ರಿಯಕೃಷ್ಣ ಅವರನ್ನು ಕಣಕ್ಕಿಳಿಸಿದರೆ ಶೋಭಾ ಅವರಿಗೆ ಪ್ರಬಲ ಪೈಪೋಟಿ ನೀಡಲು ಸಾಧ್ಯ. ಹೀಗಾಗಿ ಅವರ ಮನವೊಲಿಸಲಾಗುತ್ತಿದೆ ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದರು.

ಕಾಂಗ್ರೆಸ್‌ ಕಡೆ ಮುಖ ಮಾಡಿರುವ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರು ಡಿ.ಕೆ. ಶಿವಕುಮಾರ್‌ ಪರವಾಗಿ ಪ್ರಿಯಕೃಷ್ಣ ಅವರನ್ನು ಭೇಟಿ ಮಾಡಿ ಮನವೊಲಿಸಲು ಯತ್ನಿಸಿದ್ದಾರೆ. ಅಲ್ಲದೆ, ಪ್ರಿಯಕೃಷ್ಣ ಅವರ ತಂದೆ, ವಿಜಯನಗರ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಜೊತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಚರ್ಚೆ ನಡೆಸಿದ್ದಾರೆ. ಪ್ರಿಯಕೃಷ್ಣ ಸ್ಪರ್ಧಿಸಿದರೆ ಗೆಲ್ಲಿಸಿಕೊಂಡು ಬರುವುದಾಗಿ ಸಚಿವ ಕೃಷ್ಣ ಬೈರೇಗೌಡ ಕೂಡಾ ಹೇಳಿದ್ದಾರೆ. ಪಕ್ಷದ ನಾಯಕರ ಒತ್ತಡದ ಕಾರಣಕ್ಕೆ ಸ್ಪರ್ಧಿಸಲು ಪ್ರಿಯಕೃಷ್ಣ ಮುಂದಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ADVERTISEMENT

‘ಕೇಂದ್ರ’ದಿಂದ ಮನ್ಸೂರ್ ಅಥವಾ ನಜೀರ್‌?: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿಖಾನ್‌ ಅಥವಾ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮ್ಮದ್ ಪೈಕಿ ಒಬ್ಬರಿಗೆ ಟಿಕೆಟ್‌ ನೀಡಲು ಚರ್ಚೆ ನಡೆದಿದೆ. ಇದುವರೆಗೆ ಮನ್ಸೂರ್ ಅಲಿಖಾನ್‌ ಹೆಸರು ಮಾತ್ರ ಮುಂಚೂಣಿಯಲ್ಲಿತ್ತು. ಇದೀಗ ಚುನಾವಣೆಗೆ ಸ್ಪರ್ಧಿಸಲು ಸಿದ್ಧವಾಗಿರುವಂತೆ ನಜೀರ್‌ ಅವರಿಗೂ ಸೂಚನೆ ನೀಡಲಾಗಿದೆ. ಹೀಗಾಗಿ, ಈ ಇಬ್ಬರ ಪೈಕಿ ಒಬ್ಬರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ ಎಂದು ಪಕ್ಷದ ನಾಯಕರೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.