ವಿಧಾನಸೌಧ
ಬೆಂಗಳೂರು: ಬೆಂಗಳೂರು ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣದ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶಕ್ಕಾಗಿ ಸುಗ್ರೀವಾಜ್ಞೆ ಹೊರಡಿಸಲು ಶುಕ್ರವಾರ ನಡೆದ ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ರಸ್ತೆ ವಿಸ್ತರಣೆಯ ಉದ್ದೇಶಕ್ಕಾಗಿ ಬಳಕೆಯಾಗುವ 15.36 ಎಕರೆ ಭೂಮಿಗೆ ಪರಿಹಾರವಾಗಿ ಟಿಡಿಆರ್ (ಅಭಿವೃದ್ಧಿ ಹಕ್ಕು ವರ್ಗಾವಣೆ) ₹3,014 ಕೋಟಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಸಣ್ಣ ಜಾಗಕ್ಕೆ ಭಾರಿ ಮೊತ್ತವನ್ನು ಪಾವತಿಸಬೇಕಾದ ಹೊರೆಯಿಂದ ತಪ್ಪಿಸಿಕೊಳ್ಳಲು ಸುಗ್ರೀವಾಜ್ಞೆಯ ಆಸರೆ ಪಡೆಯಲು ಸರ್ಕಾರ ಮುಂದಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು, ಬೆಂಗಳೂರು ಅರಮನೆ (ಆರ್ಜನೆ ಮತ್ತು ವರ್ಗಾವಣೆ) ಅಧಿನಿಯಮ–1996ಕ್ಕೆ ಸಂಬಂಧಪಟ್ಟ ಸಿವಿಲ್ ಮೇಲ್ಮನವಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ. ಈ ಹಂತದಲ್ಲಿ ಅಭಿವೃದ್ಧಿ ಹಕ್ಕುಗಳನ್ನು(ಟಿಡಿಆರ್) ವಿತರಿಸಿದರೆ ರಾಜ್ಯದ ಹಿತಾಸಕ್ತಿಯ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದರು.
ಅರಮನೆ ಮೈದಾನ ಒಟ್ಟು 472 ಎಕರೆ 16 ಗುಂಟೆ ಜಾಗ ಹೊಂದಿದೆ. 1996ರ ಅಧಿನಿಯಮ ರೂಪಿಸಿದಾಗ ₹11 ಕೋಟಿ ಪರಿಹಾರ ನಿಗದಿ ಮಾಡಲಾಗಿತ್ತು. ಇದರಲ್ಲಿ ಒಂದಷ್ಟು ಭಾಗವನ್ನು ರಾಜವಂಶಸ್ಥರು ಪರಿಹಾರವಾಗಿ ಪಡೆದಿದ್ದಾರೆ. ಅಲ್ಲದೇ, ಈ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಇದಕ್ಕೆ ಸುಪ್ರೀಂ ಕೋರ್ಟ್‌ನಿಂದ ಯಾವುದೇ ತಡೆಯಾಜ್ಞೆ ಇಲ್ಲ ಎಂದರು.
ಆದರೆ, ಕಳೆದ ಡಿಸೆಂಬರ್ 10ರಂದು ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ಮತ್ತು ಇತರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿತು. ಆ ಆದೇಶದ ಪ್ರಕಾರ ಕರ್ನಾಟಕ ಸ್ಟ್ಯಾಂಪ್ ಕಾಯ್ದೆಯ ಸೆಕ್ಷನ್ 45 ಬಿಗೆ ಅನುಗುಣವಾಗಿ ಅರಮನೆ ಮೈದಾನಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಮಾರ್ಗಸೂಚಿ ಮೌಲ್ಯಕ್ಕೆ ಅನುಗುಣವಾಗಿ ರಸ್ತೆ ವಿಸ್ತರಣೆ ಉದ್ದೇಶಕ್ಕಾಗಿ ಅರಮನೆ ಜಾಗವನ್ನು ಮೌಲ್ಯೀಕರಿಸಿ, ವರ್ಗಾವಣೆ ಮಾಡಬಹುದಾದ ಟಿಡಿಆರ್ ನೀಡುವಂತೆ ನಿರ್ದೇಶನ ನೀಡಿತು ಎಂದು ಹೇಳಿದರು.
ಕೇವಲ ಎರಡು ಕಿ.ಮೀ ರಸ್ತೆ ಅಭಿವೃದ್ಧಿಗೆ ₹3,014 ಕೋಟಿ ಎಂದರೆ, ಪ್ರತಿ ಎಕರೆಗೆ ₹200 ಕೋಟಿ ಆಗುತ್ತದೆ. ಇದರಿಂದ ರಾಜ್ಯದಲ್ಲಿ ಆರ್ಥಿಕವಾಗಿ ಗಂಡಾಂತರ ಪರಿಸ್ಥಿತಿ ಉದ್ಭವವಾಗುತ್ತದೆ. ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗದ ಸ್ಥಿತಿಯೂ ಉದ್ಭವಿಸುತ್ತದೆ ಎಂದು ಸಚಿವರು ಹೇಳಿದರು.
ಈ ಸುಗ್ರೀವಾಜ್ಞೆ ಜಾರಿ ಮಾಡುವುದರಿಂದ ಅಗತ್ಯವಿರುವಷ್ಟು ಜಾಗವನ್ನು ಬಳಸಿಕೊಳ್ಳಲು ಮತ್ತು ಉದ್ದೇಶಿತ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರಕ್ಕೆ ಅಧಿಕಾರ ದೊರೆಯುತ್ತದೆ. ಯಾವುದೇ ನ್ಯಾಯಾಲಯದ ತೀರ್ಪು ಅಥವಾ ಸರ್ಕಾರವು ಈ ಹಿಂದೆ ಕೈಗೊಂಡ ತೀರ್ಮಾನದಂತೆ ಯಾವುದೇ ಮೂಲಸೌಕರ್ಯ ಯೋಜನೆಯಿಂದ ಭಾಗಶಃ ಅಥವಾ ಸಂಪೂರ್ಣವಾಗಿ ಹಿಂದೆ ಸರಿಯಲು ಸುಗ್ರೀವಾಜ್ಞೆ ಅವಕಾಶ ನೀಡುತ್ತದೆ ಎಂದು ಎಚ್.ಕೆ.ಪಾಟೀಲ ವಿವರಿಸಿದರು.
ಒಂದು ವೇಳೆ ಸುಪ್ರೀಂ ಕೋರ್ಟ್ ಸಿವಿಲ್ ಮೇಲ್ಮನವಿ ವಿಚಾರದಲ್ಲಿ ಸರ್ಕಾರದ ಪರವಾಗಿ ಆದೇಶ ನೀಡಿದರೆ, ಮಾರಾಟ ಅಥವಾ ಬೇರೆ ಯಾವುದೇ ರೀತಿಯಲ್ಲಿ ಬಳಕೆಯಾದ ಜಾಗದ ಟಿಡಿಆರ್ ಮೊತ್ತವನ್ನು ಹಿಂಪಡೆಯುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಸುಗ್ರೀವಾಜ್ಞೆಯ ಮೂಲಕ ಅಧಿಕಾರ ಪಡೆಯುವುದೇ ಸೂಕ್ತ ಎಂದು ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎಂದು ಹೇಳಿದರು.
ಕೆಲವೇ ದಿನಗಳಲ್ಲಿ ಈ ಪ್ರಕರಣದ ವಿಚಾರಣೆ ಬರಲಿದ್ದು, ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರವನ್ನೂ ಸಲ್ಲಿಸಬೇಕಾಗಿರುವ ಕಾರಣ ತುರ್ತು ಸಂಪುಟ ಸಭೆ ನಡೆಸಲಾಯಿತು ಎಂದೂ ಪಾಟೀಲ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.