ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ವಿವಿಧ ಕ್ಷೇತ್ರದ 40 ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ‍್ರದಾನ ಮಾಡಲಾಯಿತು.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ 2024ನೇ ಸಾಲಿನ ಪ್ರಥಮ ಸಂತ ಸೇವಾಲಾಲ್ ಪ್ರಶಸ್ತಿಯನ್ನು ಸಾಹಿತಿ ಬಿ.ಟಿ.ಲಲಿತಾ ನಾಯಕ್ ಅವರಿಗೆ ಪ್ರದಾನ ಮಾಡಲಾಯಿತು. 2023–24ನೇ ವರ್ಷದ ಗೌರವ ಪ್ರಶಸ್ತಿ ಮತ್ತು 2022– 2024ನೇ ಸಾಲಿನ ಪುಸ್ತಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಲಲಿತಾ ನಾಯಕ್, ‘ಕಲಿತ ವಿದ್ಯೆಯನ್ನು ಮೂಢನಂಬಿಕೆ ಬಿತ್ತಲು ಬಳಸಿದರೆ ಅದಕ್ಕೆ ಅರ್ಥವಿರುವುದಿಲ್ಲ. ದೇಶದ ವಿವಿಧೆಡೆ ನೆಲಸಿರುವ ಸಮುದಾಯದ ಜನರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ದೊರೆತ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಸಾಧನೆ ಮಾಡಬೇಕು’ ಎಂದು ಹೇಳಿದರು.
‘ನನಗೆ ಪ್ರಶಸ್ತಿ ಕೊಟ್ಟಿರುವುದಕ್ಕೆ ಹಲವರಿಗೆ ಅಸಮಾಧಾನ ಇದೆ. ಸಮುದಾಯದ ಇತರೆ ಸಾಧಕರನ್ನು ಪರಿಗಣಿಸುವಂತೆ ಹೇಳಿದ್ದೆ. ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುವ ಮೂಲಕ ನನ್ನ ಜನ್ಮದಿನ ಆಚರಿಸಿಕೊಳ್ಳಲು ನಿರ್ಧರಿಸಿದ್ದೇನೆ’ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್.ಗೋವಿಂದಸ್ವಾಮಿ, ರಿಜಿಸ್ಟ್ರಾರ್ ಡಿ.ಎಂ.ರವಿಕುಮಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಮುಕುಂದರಾಜ್, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಮಾನಸ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.