ADVERTISEMENT

ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಚುನಾವಣೆ: ಬಸವರಾಜ ಬೊಮ್ಮಾಯಿ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೀಸಲಾತಿ ಕುರಿತು ಸರ್ವಪಕ್ಷ ಸಭೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 20:02 IST
Last Updated 23 ಮಾರ್ಚ್ 2022, 20:02 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿದ ಬಳಿಕವೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎನ್ನುವ ಒಮ್ಮತದ ತೀರ್ಮಾನವಾಗಿದೆ‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದಲ್ಲಿ ಬುಧವಾರ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

‘ಎಲ್ಲಾ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರು ವುದನ್ನು ಗುರುತಿಸ ಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು. ಒಟ್ಟಾರೆ ಮೀಸಲಾತಿ ಶೇ 50 ಮೀರಬಾರದು ಎನ್ನುವಸುಪ್ರೀಂ ಕೋರ್ಟ್‌ ಷರತ್ತುಗಳನ್ವಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು‘ ಎಂದರು.

ADVERTISEMENT

‘ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸ ಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿ ಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.

‘ಇತ್ತೀಚಿನ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಅನುಗುಣವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಲು ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಯಾವ ರೀತಿ ಚುನಾವಣೆ ನಡೆಯಬೇಕು ಎನ್ನುವ ವಿಚಾರದಲ್ಲಿ ಸುದೀರ್ಘ ಚರ್ಚೆಯಾಗಿದೆ. ಅಡ್ವೊಕೇಟ್ ಜನರಲ್ ಅವರು ಕಾನೂನಿನ ವಸ್ತುಸ್ಥಿತಿಯ ವಿವರಗಳನ್ನು ತಿಳಿಸಿದ್ದಾರೆ‘ ಎಂದು ಅವರು ಹೇಳಿದರು.

‘ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆ ನಡೆಸಬೇಕೇ ಅಥವಾ ಸುಪ್ರೀಂ ಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೇ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ‘ ಎಂದರು.

ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಒಲವು
‘ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. ಶೇ 7.5ರಷ್ಟು ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ ಹೆಚ್ಚಾಗಿದೆ. ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚಿಸಿತ್ತು. ಆ ಸಮಿತಿಯ ವರದಿಯಲ್ಲಿ ಎಸ್.ಸಿ ಮತ್ತು ಎಸ್.ಟಿಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕಾಗಿದೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

’ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ವರದಿ, ಮಹಾರಾಷ್ಟ್ರದ ಜಯಶ್ರೀ ಪಾಟೀಲ್ ಪ್ರಕರಣ ಹಾಗೂ ಇಂದಿರಾ ಸಹಾನಿ ಪ್ರಕರಣಗಳ ತೀರ್ಪುಗಳ ಹಿನ್ನೆಲೆಯಲ್ಲಿ ಹಾಗೂ ನ್ಯಾಯಮೂರ್ತಿ ಸುಭಾಷ್ ಅಡಿ ಅವರಿಂದಲೂ ಮಧ್ಯಂತರ ವರದಿ ಪಡೆದು ಈ ಜನಾಂಗಕ್ಕೆ ಮೀಸಲಾತಿ ಹೆಚ್ಚು ಮಾಡುವ ಮೂಲಕ ನ್ಯಾಯ ಕೊಡಬೇಕೆಂಬ ತೀರ್ಮಾನವಾಗಿದೆ‘ ಎಂದರು.

‘ಮೀಸಲಾತಿ ಕೊಡುವುದಾದರೆ ಸಂವಿಧಾನಾತ್ಮಕವಾಗಿ ಹಾಗೂ ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ನೀಡಬೇಕು. ಆ ನಿಟ್ಟಿನಲ್ಲಿ ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಮೂರೂ ವರದಿಗಳ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ಅದನ್ನು ಸರ್ವ ಪಕ್ಷಗಳ ಸಭೆಯಲ್ಲಿಟ್ಟು, ಒಪ್ಪಿಗೆ ಪಡೆಯಲಾಗುವುದು’ ಎಂದರು.

‘ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.