ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರ ಅವಧಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಗಳ ಪೈಕಿ, ಪೂರ್ಣಗೊಂಡಿರುವ 761 ಕಾಮಗಾರಿಗಳ ತನಿಖೆ ನಡೆಸಿರುವ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ಹಲವು ನ್ಯೂನತೆಗಳನ್ನು ಪತ್ತೆ ಮಾಡಿದೆ.
ಆಯೋಗವು ಅನುಬಂಧಗಳ ಸಹಿತ ಒಟ್ಟು 8,900 ಪುಟಗಳ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಸಲ್ಲಿಸಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಬೇಕು ಮತ್ತು ಸುಧಾರಣಾ ಕ್ರಮಕೈಗೊಳ್ಳಬೇಕು ಎಂದೂ ತನ್ನ ವರದಿಯಲ್ಲಿ ಶಿಫಾರಸು ಮಾಡಿದೆ.
ಆಯೋಗವು ರ‍್ಯಾಂಡಮ್ ಆಗಿ ಆಯ್ಕೆ ಮಾಡಿದ್ದ 528 ಮತ್ತು ಇತರೆ 233 ಸೇರಿ ಒಟ್ಟು 761 ಪೂರ್ಣಗೊಂಡ ಕಾಮಗಾರಿಗಳ ತನಿಖೆ ನಡೆಸಿ ವರದಿ ನೀಡಿದೆ. ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದ ಕಡತ, ಸ್ಥಳ ಮತ್ತು ಲೆಕ್ಕವನ್ನು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ.
ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಈ ಅವಧಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ವ್ಯಾಪಕ ಭ್ರಷ್ಟಾಚಾರಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡಲು ಸರ್ಕಾರ 2023ರ ಡಿ. 15ರಂದು ಈ ಆಯೋಗವನ್ನು ರಚಿಸಿತ್ತು.
ಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರ ಅವಧಿಯಲ್ಲಿ ಅನುಷ್ಠಾನಗೊಂಡಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿರುವ ಬಗ್ಗೆ ತನಿಖೆ ನಡೆಸಬೇಕೆಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 2023ರ ಜುಲೈ 13ರಂದು ಟಿಪ್ಪಣಿ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದ್ದರು.
ಅದರ ಅನ್ವಯ, ಸಮಗ್ರ ತನಿಖಾ ವರದಿ ಸಲ್ಲಿಸಲು ತಜ್ಞರನ್ನು ಒಳಗೊಂಡ ನಾಲ್ಕು ವಿಶೇಷ ತನಿಖಾ ಸಮಿತಿಗಳನ್ನು ರಚಿಸಿ ಸರ್ಕಾರವು ಆಗಸ್ಟ್ 5ರಂದು ಆದೇಶ ಹೊರಡಿಸಿತ್ತು. ಈ ಆದೇಶವನ್ನು ನಂತರ ಹಿಂಪಡೆದಿದ್ದ ಸರ್ಕಾರ, ತನಿಖೆಯ ಹೊಣೆಯನ್ನು ನಾಗಮೋಹನದಾಸ್ ನೇತೃತ್ವದ ಆಯೋಗಕ್ಕೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.