ADVERTISEMENT

ಹಾಸಿಗೆ ಬ್ಲಾಕಿಂಗ್‌ ಆರೋಪ: ಲೋಕಾಯುಕ್ತರಿಂದ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 5 ಮೇ 2021, 20:30 IST
Last Updated 5 ಮೇ 2021, 20:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌ ಸೋಂಕಿತರ ಹೆಸರಿನಲ್ಲಿ ಆಸ್ಪತ್ರೆಗಳ ಹಾಸಿಗೆಗಳನ್ನು ಕಾಯ್ದಿರಿಸಿ, ಹಣಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಕುರಿತು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಲೋಕಾಯುಕ್ತ ಪೊಲೀಸರಿಂದ ತನಿಖೆಗೆ ಆದೇಶಿಸಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕರು ಮಂಗಳವಾರ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಆಧರಿಸಿ ಲೋಕಾಯುಕ್ತರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಇದೇ ಪ್ರಕರಣದ ಕುರಿತು ಸಿಸಿಬಿ ಪೊಲೀಸರಿಂದ ತನಿಖೆಗೆ ಆದೇಶಿಸಿದ್ದು, ಲೋಕಾಯುಕ್ತ ಪೊಲೀಸರೂ ಪ್ರತ್ಯೇಕವಾಗಿ ತನಿಖೆ ನಡೆಸಲಿದ್ದಾರೆ ಎಂದು ಲೋಕಾಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಆಯುಕ್ತರು, ಬಿಬಿಎಂಪಿ ಆಡಳಿತಾಧಿಕಾರಿ, ಮುಖ್ಯ ಆಯುಕ್ತರು, ವಲಯ ಆಯುಕ್ತರು, ವಿಶೇಷ ಆಯುಕ್ತರು, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು ಮತ್ತು ಆರೋಗ್ಯಾಧಿಕಾರಿಗಳು ಸೇರಿದಂತೆ 31 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ADVERTISEMENT

‘ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ಪತ್ರೆಗಳಲ್ಲಿ ಲಭ್ಯವಿದ್ದ ಹಾಸಿಗೆಗಳು, ಚಿಕಿತ್ಸೆಗೆ ಬಳಸಿದ ಹಾಸಿಗೆಗಳು, ಚಿಕಿತ್ಸೆ ಪಡದವರು ಸೇರಿದಂತೆ ಎಲ್ಲ ಮಾಹಿತಿಗಳನ್ನೂ ಪ್ರತಿವಾದಿ ಅಧಿಕಾರಿಗಳು ಮೂರು ವಾರಗಳೊಳಗೆ ಲೋಕಾಯುಕ್ತದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಿಗೆ ಸಲ್ಲಿಸಬೇಕು’ ಎಂದು ಸೂಚಿಸಿ 31 ಅಧಿಕಾರಿಗಳಿಗೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.

ಲೋಕಾಯುಕ್ತವು, ಬಿಬಿಎಂಪಿಯಲ್ಲಿ ನಡೆದಿರಬಹುದಾದ ದುರಾಡಳಿತದ ಕುರಿತು ತನಿಖೆಗೆ ಆದೇಶಿಸಿದೆ. ಸಿಸಿಬಿ ಪೊಲೀಸರು ಮತ್ತು ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆಯಲ್ಲಿ ಪರಸ್ಪರ ಸಹಕಾರದಿಂದ ಮುಂದುವರಿಯಬೇಕು. ಲೋಕಾಯುಕ್ತದ ಎಡಿಜಿಪಿ ಮೂರು ವಾರಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸಬೇಕು ಎಂದು ಲೋಕಾಯುಕ್ತರು ಬುಧವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.