ADVERTISEMENT

ಬೆಳಗಾವಿ ಜಿಲ್ಲೆಯ 11,600 ಜನರಿಗೆ ಹಕ್ಕುಪತ್ರ ವಿತರಿಸಿದ ಬಸವರಾಜ ಬೊಮ್ಮಾಯಿ

ಪ್ರವಾಹ ಹಾನಿ ತಡೆಗೆ ₹125 ಕೋಟಿ ವೆಚ್ಚದ ಗೋಡೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 11:26 IST
Last Updated 15 ಮಾರ್ಚ್ 2023, 11:26 IST
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಬಟಕುರ್ಕಿ ಗ್ರಾಮದಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಂಬಾನಿ ಮಹಿಳೆಗೆ ಹಕ್ಕುಪತ್ರ ವಿತರಿಸಿದರು
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಬಟಕುರ್ಕಿ ಗ್ರಾಮದಲ್ಲಿ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲಂಬಾನಿ ಮಹಿಳೆಗೆ ಹಕ್ಕುಪತ್ರ ವಿತರಿಸಿದರು   

ಬಟಕುರ್ಕಿ (ಬೆಳಗಾವಿ): ‘ಮಲಪ್ರಭೆ ತೀರದಲ್ಲಿ ಪ್ರವಾಹದಿಂದ ಆಗುವ ಹಾನಿ ತಪ್ಪಿಸಲು ₹125 ಕೋಟಿ ವೆಚ್ಚದಲ್ಲಿ ರಕ್ಷಣಾ ಗೋಡೆ ನಿರ್ಮಾಣಕ್ಕೆ ಈಗಾಗಲೇ ಟೆಂಡರ್ ಕರೆಯಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ರಾಮದುರ್ಗ ತಾಲ್ಲೂಕಿನ ಬಟಕುರ್ಕಿಯಲ್ಲಿ ಬುಧವಾರ, ವಿವಿಧ ಯೋಜನೆಗಳ 11,600 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ, ಅನುಷ್ಠಾನ ಹಾಗೂ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬೆಳೆಹಾನಿ ಪರಿಹಾರವಾಗಿ ಕೇಂದ್ರ ಸರ್ಕಾರ ನೀಡುವ ಪರಿಹಾರ ಧನದ ಎರಡುಪಟ್ಟು ಪರಿಹಾರವನ್ನು ರಾಜ್ಯ ಸರ್ಕಾರ ನೀಡಿರುವುದು ಇದೇ ಮೊದಲು. ಹಿಂದಿನ ಸರ್ಕಾರಗಳಂತೆ ಬಾಯಿಮಾತಿನಲ್ಲಿ ಪರಿಹಾರ ಹೇಳುವುದಲ್ಲ; ತ್ವರಿತವಾಗಿ ಸ್ಪಂದಿಸುವುದು ನಮ್ಮ ಬದ್ಧತೆ’ ಎಂದರು.

ADVERTISEMENT

‘ಅನೇಕ ಕಾನೂನು ತೊಡಕು ಪರಿಹರಿಸಿ ಲಂಬಾಣಿ ತಾಂಡ, ಗೊಲ್ಲರಹಟ್ಟಿ, ಕುರುಬರ ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲಾಗಿದೆ. ಅದೇ ರೀತಿ ಕಾಡಂಚಿನಲ್ಲಿ ಹಾಗೂ ಖಾಸಗಿ ಜಾಗೆಯಲ್ಲಿ ಇರುವ ಜನರಿಗೂ ಹಕ್ಕುಪತ್ರವನ್ನು ನೀಡಲು ಸರ್ಕಾರ ಬದ್ಧವಿದೆ’ ಎಂದರು.

‘ಪ್ರಧಾನಿ ನರೇಂದ್ರ ಮೋದಿ ಈಚೆಗೆ ಕಲಬುರಗಿಯಲ್ಲಿ 50 ಸಾವಿರಕ್ಕೂ ಅಧಿಕ ಜನರಿಗೆ ಹಕ್ಕುಪತ್ರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದಾವಣಗೆರೆಯಲ್ಲಿ ಇನ್ನೂ 50 ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಿದ್ದಾರೆ’ ಎಂದರು.

‘ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರಿಗೂ ಸ್ಪಂದಿಸಬೇಕು. ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು. ನಾನು ಅಂಥ ನಿರ್ಧಾರ ತೆಗೆದುಕೊಂಡಿದ್ದೇನೆ’ ಎಂದೂ ಹೇಳಿದರು.

‘ಶಾಲಾ ಮಕ್ಕಳಿಗಾಗಿಯೇ ವಿಶೇಷವಾಗಿ 2,000 ಬಸ್‌ಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ’ ಎಂದೂ ಅವರು ಮಾಹಿತಿ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ‘ಸಂಕಷ್ಟದಲ್ಲಿದ್ದ ಬಂಜಾರ ಸಮಾಜಕ್ಕೆ ಈ ಹಕ್ಕುಪತ್ರಗಳು ನೆಮ್ಮದಿ ತಂದಿವೆ. ಈ ವಿಚಾರದಲ್ಲಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್‌.ಅಶೋಕ ಅವರ ಶ್ರಮ ದೊಡ್ಡದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಮಹಾದೇವಪ್ಪ ಯಾದವಾಡ ಮಾತನಾಡಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸ್ವಾಗತಿಸಿದರು. ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೊಯರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.