ADVERTISEMENT

ಉಪಚುನಾವಣೆ: ಅಭ್ಯರ್ಥಿಗಳ ಹಣೆಬರಹ ನಿರ್ಧಾರ ಇಂದು

ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳಿಗೆ ಇಂದು ಮತದಾನ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 20:27 IST
Last Updated 16 ಏಪ್ರಿಲ್ 2021, 20:27 IST
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಶನಿವಾರ ನಡೆಯಲಿದ್ದು, ಶುಕ್ರವಾರ ಚುನಾವಣಾ ಸಿಬ್ಬಂದಿ ಅಗತ್ಯ ಸಾಮಗ್ರಿಗಳೊಂದಿಗೆ ಸಿದ್ಧತೆ ಮಾಡಿಕೊಂಡರು
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಶನಿವಾರ ನಡೆಯಲಿದ್ದು, ಶುಕ್ರವಾರ ಚುನಾವಣಾ ಸಿಬ್ಬಂದಿ ಅಗತ್ಯ ಸಾಮಗ್ರಿಗಳೊಂದಿಗೆ ಸಿದ್ಧತೆ ಮಾಡಿಕೊಂಡರು   

ಕಲಬುರ್ಗಿ: ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ತೀವ್ರ ಜಿದ್ದಾಜಿದ್ದಿನ ಕಣಗಳಾಗಿರುವ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಶನಿವಾರ (ಏ.17) ನಿರ್ಧಾರವಾಗಲಿದೆ.

ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸೋಂಕು ಹರಡದಂತೆ ಎಚ್ಚರ ವಹಿಸಲು ಮತಗಟ್ಟೆಗಳಲ್ಲಿ ಅಂತರ ಕಾಯ್ದುಕೊಂಡು ಮತದಾನ ಮಾಡಬೇಕಿದೆ. ಹೀಗಾಗಿ ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ. ಬೆಳಿಗ್ಗೆ 7ರಿಂದ ಸಂಜೆ 7ರ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಮತ್ತು ಶಾಸಕರಾಗಿದ್ದ ಬಿ.ನಾರಾಯಣರಾವ್‌ ಅವರು ಕೋವಿಡ್‌ನಿಂದ ಮೃತಪಟ್ಟ ಕಾರಣಕ್ಕಾಗಿ ಬೆಳಗಾವಿ, ಬಸವಕಲ್ಯಾಣಕ್ಕೆ ಹಾಗೂ ಬಿಜೆಪಿ ಸರ್ಕಾರದ ರಚನೆಗಾಗಿ ರಾಜ್ಯದ ವಿವಿಧೆಡೆಯ 16 ಶಾಸಕರೊಟ್ಟಿಗೆ ಪ್ರತಾಪಗೌಡ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದೆ.

ADVERTISEMENT

ಬಸವಕಲ್ಯಾಣದಲ್ಲಿ ದಿ.ನಾರಾಯಣರಾವ್‌ ಅವರ ಪತ್ನಿ ಕಾಂಗ್ರೆಸ್‌ನ ಮಾಲಾ, ಬಿಜೆಪಿಯ ಶರಣು ಸಲಗರ, ಜೆಡಿಎಸ್‌ನ ಸಯ್ಯದ್‌ ಯಸ್ರಬ್ ಅಲಿ ಖಾದ್ರಿ, ಪಕ್ಷೇತರರಾಗಿರುವ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಒಟ್ಟು 2,39,782 ಮತದಾರರು ಇದ್ದಾರೆ. 326 ಮತಗಟ್ಟೆಗಳಿದ್ದು, 163 ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ.ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ 9 ವಿಡಿಯೊಗ್ರಾಫರ್‌ಗಳನ್ನು ನಿಯೋಜಿಸಲಾಗಿದೆ. ಒಟ್ಟು 1,960 ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.20 ಜನ ಕೋವಿಡ್‌ ಸೋಂಕಿತರು ಮತದಾನ ಮಾಡುವುದಾಗಿ ಅರ್ಜಿ ಸಲ್ಲಿಸಿದ್ದು, ಅವರಿಗೆ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಮತದಾನಕ್ಕೆ ಅವಕಾಶ ನೀಡಲಾಗಿದೆ.

ಪರಿಶಿಷ್ಟ ಪಂಗಡಕ್ಕೆ ಮೀಸಲಿರುವಮಸ್ಕಿಯಲ್ಲಿ ಈ ಬಾರಿ ಪ್ರತಾಪಗೌಡ ಪಾಟೀಲ ಬಿಜೆಪಿಯಿಂದ ಹಾಗೂ ಬಸನಗೌಡ ಪಾಟೀಲ ತುರ್ವಿಹಾಳ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಕಳೆದಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರ್ವಿಹಾಳಆಗ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪ್ರತಾಪಗೌಡ ಪಾಟೀಲ ವಿರುದ್ಧ ಕೇವಲ213 ಮತಗಳ ಅಂತರದಿಂದ ಸೋತಿದ್ದರು.

ಕಣದಲ್ಲಿ ಒಟ್ಟು ಎಂಟು ಅಭ್ಯರ್ಥಿಗಳಿದ್ದಾರೆ. ಹಣ ಹಂಚಿಕೆಗೆಸಂಬಂಧಿಸಿದ ಆರೋಪ–ಪ್ರತ್ಯಾರೋಪ, ವಿಡಿಯೊಗಳ ಸದ್ದು ಇಲ್ಲಿ ಜೋರಾಗಿರುವುದರಿಂದ ಈ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.