
ಆರ್.ಅಶೋಕ
ಬೆಂಗಳೂರು: ಬೆಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಆಗಿರುವ ಲೋಪ ಸೇರಿ ಹಲವು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ನಡೆಯಬೇಕಿರುವುದರಿಂದ ಅಧಿವೇಶನವನ್ನು ಒಂದು ವಾರ ವಿಸ್ತರಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಅಧಿವೇಶನವನ್ನು ಇದೇ 8ರಿಂದ 19ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಎರಡು ದಿನ ಮೊಟಕುಗೊಂಡಿದೆ. ರಾಜ್ಯದ ಜ್ವಲಂತ ಸಮಸ್ಯೆಗಳ ಚರ್ಚೆಯಾಗಬೇಕಿದೆ. ಈ ಹಿನ್ನೆಲೆಯಲ್ಲಿ ಅಧಿವೇಶನವನ್ನು ವಿಸ್ತರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತ ಚರ್ಚೆ ಮತ್ತು ಶಾಸಕರು ಪ್ರಸ್ತಾಪ ಮಾಡಿರುವ ಹಲವು ಗಂಭೀರ ವಿಷಯಗಳಿಗೆ ಮುಖ್ಯಮಂತ್ರಿ ಮತ್ತು ಸಚಿವರು ಉತ್ತರ ನೀಡಬೇಕಿದೆ. ಇದರ ಜತೆಯಲ್ಲಿ ರಾಜ್ಯದಲ್ಲಿ ಕುಸಿದಿರುವ ಕಾನೂನು ಮತ್ತು ಸುವ್ಯವಸ್ಥೆ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅನುದಾನ ಬಳಕೆಯ ಕಳಪೆ ಸಾಧನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಶಾಸಕರಿಗೆ ಸಾಕಷ್ಟು ಸಮಯಾವಕಾಶ ಬೇಕಾಗಿದೆ ಎಂದಿದ್ದಾರೆ.
ಪಡಿತರ ಚೀಟಿ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ತೋರಿದೆ. ರಾಜ್ಯದಾದ್ಯಂತ ಪಡಿತರ ಚೀಟಿಗಾಗಿ ಸಲ್ಲಿಸಿರುವ 3.22 ಲಕ್ಷಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ. ಅವುಗಳಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಮತ್ತು ಬೆಂಗಳೂರಿನಿಂದ ಅಧಿಕ ಅರ್ಜಿಗಳು ಸಲ್ಲಿಕೆಯಾಗಿವೆ. ಇಂತಹ ಗಂಭೀರ ಸಮಸ್ಯೆಗಳ ಬಗ್ಗೆ ಚರ್ಚೆಯಾಗಿ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸೋಮವಾರ ಸಂತಾಪ ಸೂಚಿಸಿ, ವಿಧಾನಮಂಡಲದ ಎರಡೂ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.