ADVERTISEMENT

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಬಿಐಎಎಲ್‌ ಒಪ್ಪಿಗೆ ಅಗತ್ಯ: ಕೇಂದ್ರ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 15:52 IST
Last Updated 18 ಡಿಸೆಂಬರ್ 2025, 15:52 IST
   

ನವದೆಹಲಿ: ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣವನ್ನು ವಾಣಿಜ್ಯ ಕಾರ್ಯಾಚರಣೆಗೆ ಮತ್ತೆ ತೆರೆಯುವ ಬಗ್ಗೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳೀಧರ ಮೊಹೊಲ್‌ ಸ್ಪಷ್ಟಪಡಿಸಿದ್ದಾರೆ. 

ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್‌ ಪ್ರಶ್ನೆಗೆ ಉತ್ತರ ನೀಡಿರುವ ಅವರು, ‘ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರದ ಕೋರಿಕೆಯ ಮೇರೆಗೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮೂರು ಸ್ಥಳಗಳ ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳನ್ನು ನಡೆಸಿದೆ. ಈ ಅಧ್ಯಯನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ. ಆ ಬಳಿಕ ಯಾವುದೇ ಪ್ರಸ್ತಾವ ಬಂದಿಲ್ಲ’ ಎಂದು ತಿಳಿಸಿದ್ದಾರೆ. 

ಕೇಂದ್ರ ಸರ್ಕಾರ ಹಾಗೂ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಬಿಐಎಎಲ್‌) 2008ರಲ್ಲಿ ಒಂದು ಒಪ್ಪಂದ ಮಾಡಿಕೊಂಡಿದ್ದವು. ಈ ಒಪ್ಪಂದದ ಪ್ರಕಾರ, ಬೆಂಗಳೂರು ವಿಮಾನ ನಿಲ್ದಾಣಕ್ಕೆ 25 ವರ್ಷ ಆಗುವ ತನಕ 150 ಕಿ.ಮೀ. ವ್ಯಾಪ್ತಿಯಲ್ಲಿ (ಮೈಸೂರು ಹಾಗೂ ಹಾಸನ ಹೊರತುಪಡಿಸಿ) ಬೇರೆ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸುವಂತಿಲ್ಲ. ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಕಾರ್ಯಾಚರಣೆ ನಡೆಸುವಂತೆಯೂ ಇಲ್ಲ. ಕಾರ್ಯಾಚರಣೆ ನಡೆಸಲು ಮುಂದಾದಲ್ಲಿ ಅದಕ್ಕೆ ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಒಪ್ಪಿಗೆ ಪಡೆಯಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.