ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್ ಅವರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದರು.
ಬೆಳಿಗ್ಗೆ 10.30ಕ್ಕೆ ಡಿವೈಎಸ್‌ಪಿಯಾದ ತನಿಖಾಧಿಕಾರಿ ಸತೀಶ್ ಕುಮಾರ್ ಎದುರು ಕೆಲ ದಾಖಲೆಗಳ ಸಮೇತ ಜಮೀರ್ ವಿಚಾರಣೆಗೆ ಹಾಜರಾಗಿದ್ದರು.
ಸತೀಶ್ ಕುಮಾರ್ ನೇತೃತ್ವದ ತಂಡ ಎರಡು ತಾಸು ಹಲವು ಪ್ರಶ್ನೆಗಳನ್ನು ಕೇಳಿ, ಹೇಳಿಕೆಯನ್ನು ದಾಖಲಿಸಿಕೊಂಡಿತು. ಅಗತ್ಯವಿದ್ದರೆ ಮತ್ತೊಮ್ಮೆ ವಿಚಾರಣೆಗೆ ಕರೆಯಲಾಗುತ್ತದೆ ಎಂದು ತಿಳಿಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಜಮೀರ್ ಅಹಮದ್ ಖಾನ್ ಜತೆ ಹಣಕಾಸಿನ ವ್ಯವಹಾರ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಉದ್ಯಮಿ ಕೆಜಿಎಫ್ ಬಾಬು, ನಟಿ ರಾಧಿಕಾ ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದರು.
ಮತ್ತೊಂದೆಡೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ದಿನೇಶ್ ಗುಂಡೂರಾವ್ ಅವರಿಗೂ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ಸೂಚಿಸಿದ್ದಾರೆ.
ಐಎಂಎ ಕಂಪನಿಯ ಬಹುಕೋಟಿ ವಂಚನೆ ಪ್ರಕರಣ ಸಂಬಂಧ 2019ರಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಜಮೀರ್ ಅಹಮದ್ ಖಾನ್ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಜಮೀರ್ ಹಲವರೊಂದಿಗೆ ಹಣಕಾಸು ವ್ಯವಹಾರ ನಡೆಸಿರುವುದು ಗೊತ್ತಾಗಿತ್ತು. ಬಳಿಕ ಇ.ಡಿ. ವರದಿ ಆಧರಿಸಿ ಅಂದಿನ ಭ್ರಷ್ಟಾಚಾರ ನಿಗ್ರಹ ದಳವು(ಎಸಿಬಿ) ಜಮೀರ್ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಪ್ರಕರಣ ದಾಖಲಿಸಿತ್ತು. ಬಳಿಕ ಎಸಿಬಿ ರದ್ದುಗೊಂಡ ಹಿನ್ನೆಲೆಯಲ್ಲಿ ಈ ಪ್ರಕರಣವು ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.