ADVERTISEMENT

Bengaluru Stampede | ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ರಾಮಲಿಂಗಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 9:08 IST
Last Updated 6 ಜೂನ್ 2025, 9:08 IST
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ   

ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡದ ಸಂಭ್ರಮಾಚರಣೆ ವೇಳೆ 11 ಜನರು ಪ್ರಾಣ ಕಳೆದುಕೊಂಡ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ,  ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಮತ್ತು ಇತರೆ ಪೊಲೀಸ್ ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿದ ರಾಜ್ಯ ಸರ್ಕಾರದ ನಿರ್ಧಾರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸಮರ್ಥಿಸಿಕೊಂಡರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರಿನ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಆರ್‌ಸಿಬಿ ತಂಡದ ಸಂಭ್ರಮಾಚರಣೆ  ನಡೆಸಲಾಗಿತ್ತು. ಆದರೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಗೆ ಅನುಮತಿ ನೀಡಿರಲಿಲ್ಲ. ಹೀಗಿದ್ದರೂ ಪೊಲೀಸರು ಆಚರಣೆಗೆ ಅವಕಾಶ ನೀಡಿದರು. ಎಷ್ಟು ಜನರು ಸೇರಬಹುದೆಂದು ಅಂದಾಜಿಸದಿರುವುದು ಪೊಲೀಸರು ಮತ್ತು ಗುಪ್ತಚರ ವಿಭಾಗದ ವೈಫಲ್ಯ ತೋರಿಸುತ್ತದೆ’ ಎಂದರು.

‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ಇಲ್ಲದೆ ಸಂಭ್ರಮಾಚರಣೆ ಆಯೋಜಿಸಿದ್ದ ಆರ್‌ಸಿಬಿ ತಂಡದ ಮ್ಯಾನೇಜ್‌ಮೆಂಟ್‌, ಕರ್ನಾಟಕ ರಾಜ್ಯ ಕ್ರಿಕೆಟ್‌ ಅಸೋಸಿಯೇಷನ್‌ ಮತ್ತು ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವಿರುದ್ಧ ನಾವು ಪ್ರಕರಣ ದಾಖಲಿಸಿದ್ದೇವೆ. ಇದರಲ್ಲಿ ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿಲ್ಲ. ಆದರೆ, ಅನುಮತಿ ಇಲ್ಲದೆ ಕಾರ್ಯಕ್ರಮಕ್ಕೆ ಅವಕಾಶ ನೀಡಿದ್ದಕ್ಕಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದರು.

ADVERTISEMENT

‘ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು. ಸಂಪುಟ ಸಭೆಯಲ್ಲೂ ಈ ವಿಷಯದ ಬಗ್ಗೆ ಚರ್ಚಿಸಲಾಗಿದೆ. ಈ ಕ್ರೀಡಾಂಗಣ 35 ಸಾವಿರ ಜನರಿಗೆ ಸ್ಥಳಾವಕಾಶ ಕಲ್ಪಿಸುವ ಸಾಮರ್ಥ್ಯ ಹೊಂದಿದೆ. ಆದರೆ, ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಪ್ರವೇಶ ಉಚಿತ ಎಂದು ಘೋಷಿಸಿದ ಕಾರಣ 2 ಲಕ್ಷಕ್ಕೂ ಅಧಿಕ ಜನರು ಆಗಮಿಸಿದ್ದರು. ಪರಿಸ್ಥಿತಿ ನಿರ್ವಹಿಸುವಲ್ಲಿ ಪೊಲೀಸರು ವಿಫಲರಾದರು’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ 35 ಸಾವಿರ ದೇವಾಲಯಗಳಿದ್ದು, ಅವುಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಲಾಗಿದೆ. ಎ ಮತ್ತು ಬಿ ದರ್ಜೆಯ ದೇವಾಲಯಗಳು ಸ್ವಾವಲಂಬಿಯಾಗಿದ್ದು, ಸಿ ದರ್ಜೆಯ ದೇವಾಲಯಗಳಿಗೆ ಧಾರ್ಮಿಕ ವಿಧಿ–ವಿಧಾನ ಕೈಗೊಳ್ಳಲು ಸರ್ಕಾರದಿಂದ ಅನುದಾನ ನೀಡುತ್ತೇವೆ. ಕೆಲವು ಖಾಸಗಿ ದೇವಾಲಯಗಳ ಬಗ್ಗೆ ವಿವಾದಗಳಿದ್ದು, ಅವುಗಳನ್ನು ಪರಿಶೀಲಿಸಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.