ADVERTISEMENT

ಭದ್ರಾ ಮೇಲ್ದಂಡೆ ಯೋಜನೆ: ಕೇಂದ್ರದಿಂದ ₹9,675 ಕೋಟಿ ನೆರವು

ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಮಾನ್ಯತೆ ಶೀಘ್ರ: ಕಾರಜೋಳ

​ಪ್ರಜಾವಾಣಿ ವಾರ್ತೆ
Published 16 ಜೂನ್ 2022, 13:31 IST
Last Updated 16 ಜೂನ್ 2022, 13:31 IST
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಚಿವ ಗೋವಿಂದ ಕಾರಜೋಳ ಮನವಿ ಸಲ್ಲಿಸಿದರು
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಸಚಿವ ಗೋವಿಂದ ಕಾರಜೋಳ ಮನವಿ ಸಲ್ಲಿಸಿದರು   

ನವದೆಹಲಿ: ‘ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಎಂದು ಪರಿಗಣಿಸಲು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಗೆ ನೀಡಿದೆ. ಈ ಯೋಜನೆಗೆ ಕೇಂದ್ರ ಸರ್ಕಾರವು ₹9,675 ಕೋಟಿ ಮೊತ್ತವನ್ನು ನೀಡಲಿದೆ’ ಎಂದು ಕರ್ನಾಟಕದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಈ ಯೋಜನೆಗೆ ರಾಷ್ಟ್ರೀಯ ಯೋಜನೆಯ ಮಾನ್ಯತೆ ಸಿಗಲು ಕೇಂದ್ತ ಸಚಿವ ಸಂಪುಟದ ಅನುಮೋದನೆಯಷ್ಟೇ ಬಾಕಿ ಇದೆ. ಅದು ಕೆಲವೇ ದಿನಗಳಲ್ಲಿ ಸಿಗುವ ನಿರೀಕ್ಷೆ ಇದೆ’ ಎಂದು ಅವರು ಹೇಳಿದರು.

ADVERTISEMENT

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 29.90 ಟಿಎಂಸಿ ಅಡಿ ನೀರು (ತುಂಗಾ ನದಿಯಿಂದ 17.40 ಟಿಎಂಸಿ ಅಡಿ ಹಾಗೂ ಭದ್ರಾ ಜಲಾಶಯದಿಂದ 12.50 ಟಿಎಂಸಿ ಅಡಿ) ಬಳಕೆ ಮಾಡಲಾಗುತ್ತದೆ. ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ2,25,515 ಹೆಕ್ಟೇರ್ (5,57,022 ಎಕರೆ ) ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ ಈ ಜಿಲ್ಲೆಗಳ 367 ಕೆರೆಗಳನ್ನು ಅವುಗಳ ಸಾಮರ್ಥ್ಯದ ಶೇಕಡಾ 50 ರಷ್ಟನ್ನು ತುಂಬಿಸುವ ಯೋಜನೆ ಎಂದು ಅವರು ಮಾಹಿತಿ ನೀಡಿದರು.

ರಾಷ್ಟ್ರೀಯ ಯೋಜನೆಯಾಗಿ ಮಾನ್ಯತೆ ಪಡೆಯಲು ಅವಶ್ಯವಿರುವ ಎಲ್ಲ ಪೂರಕ ಅನುಮೋದನೆಗಳನ್ನು ಕೇಂದ್ರ ಜಲ ಆಯೋಗ ಮತ್ತು ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯಗಳಿಂದ ಪಡೆಯಲಾಗಿದೆ ಎಂದು ಅವರು ತಿಳಿಸಿದರು.

ಈ ಯೋಜನೆಗೆ ತಗಲುವ ಒಟ್ಟಾರೆ ವೆಚ್ಚ ₹21,473.67 ಕೋಟಿ. ರಾಷ್ಟ್ರೀಯ ಯೋಜನೆಯಾಗಿ ಪರಿಗಣಿತವಾದ ನಂತರ ಕೇಂದ್ರ ಸರ್ಕಾರ ಈ ಯೋಜನೆಗೆ ₹9,675.29 ಕೋಟಿ ನೀಡಲಿದೆ ಎಂದರು.

ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ನಿರ್ಮಲಾ ಸೀತಾರಾಮನ್‌ ಒಪ್ಪಿಗೆ ಸೂಚಿಸಿದ್ದಾರೆ. ಇದು ಕರ್ನಾಟಕದ ಮೊದಲನೆಯ ರಾಷ್ಟ್ರೀಯ ಯೋಜನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದರು.

‘ಮಹದಾಯಿ ಯೋಜನೆಯ ಕುರಿತು ಗಜೆಂದ್ರ ಸಿಂಗ್ ಶೇಖಾವತ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಯೋಜನೆಗೆ ಅನುಮೋದನೆ ನೀಡುವ ಕುರಿತು ಸಚಿವರು ಸಕಾರಾತ್ಮಕ ಪ್ರತಿಕ್ರಿಯೆ ನೀಡಿದರು. ಕೂಡಲೇ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು’ ಎಂದು ಕಾರಜೋಳ ಮಾಹಿತಿ ನೀಡಿದರು.

‘ಮೇಕೆದಾಟು ಯೋಜನೆಯ ಕುರಿತು ಪ್ರಸ್ತಾಪಿಸಲಾಯಿತು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಇದೇ 23ರಂದು ಈ ವಿಷಯದ ಬಗ್ಗೆ ಚರ್ಚೆಯಾಗಲಿದೆ. ಅಂದಿನ ಸಭೆಯಲ್ಲಿ ಯೋಜನೆಗೆ ಅನುಮೋದನೆ ಸಿಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

‘ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳಿಗೆ ₹13 ಸಾವಿರ ಕೋಟಿಯನ್ನು ಈಗಾಗಲೇ ವೆಚ್ಚ ಮಾಡಲಾಗಿದೆ. ಕೇಂದ್ರಸರ್ಕಾರದ ಗೆಜೆಟ್‌ನಲ್ಲಿ ಕೃಷ್ಣಾ ಜಲ ವಿವಾದ ಎರಡನೇ ನ್ಯಾಯಾಧೀಕರಣದ ಐತೀರ್ಪನ್ನು ಪ್ರಕಟಿಸುವ ಮೂಲಕ ಈ ಯೋಜನೆಗೆ ನ್ಯಾಯ ಒದಗಿಸಬೇಕೆಂದು ವಿನಂತಿಸಲಾಯಿತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.