ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ನೀಡಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಭಾರತ ಜೋಡೊ ಯಾತ್ರೆಯ ಸಿದ್ಧತೆಗಳನ್ನು ವಿಫಲಗೊಳಿಸುವ ಮತ್ತು ಕಾಂಗ್ರೆಸ್ ನಾಯಕರಿಗೆ ಕಿರುಕುಳ ಯತ್ನಗಳು ನಡೆಯುತ್ತಿವೆ. ಈ ಕಾರಣ, ಜಾರಿ ನಿರ್ದೇಶನಾಲಯವು(ಇ.ಡಿ) ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಸಮನ್ಸ್ ನೀಡಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘40 ಪರ್ಸೆಂಟ್ ಸರ್ಕಾರದ ಹಗರಣಗಳನ್ನು ಕರ್ನಾಟಕ ಕಾಂಗ್ರೆಸ್ ಬಯಲುಗೊಳಿಸುತ್ತಿದೆ. ಈ ಹೊತ್ತಿನಲ್ಲಿ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನು ನಾನು ಖಂಡಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ.) ಸಮನ್ಸ್ ಜಾರಿ ಮಾಡಿದೆ.
ಇದೇ 19ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚಿಸಿದೆ. ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಅಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಕಾಲಾವಕಾಶ ನೀಡಬೇಕು ಎಂದು ಪತ್ರ ಬರೆಯಲು ಶಿವಕುಮಾರ್ ತೀರ್ಮಾನಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
‘ಭಾರತ್ ಜೋಡೊ ಯಾತ್ರೆ (ಭಾರತ ಒಗ್ಗೂಡಿಸಿ ಯಾತ್ರೆ) ಹಾಗೂ ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ವೇಳೆಯಲ್ಲೇ ಇ.ಡಿ. ನನಗೆ ಸಮನ್ಸ್ ನೀಡಿದೆ. ವಿಚಾರಣೆಗೆ ಸಹಕರಿಸಲು ನಾನು ಸಿದ್ಧನಿದ್ದೇನೆ. ಆದರೆ, ಸಮನ್ಸ್ ನೀಡಿರುವ ಸಮಯ ಹಾಗೂ ಕಿರುಕುಳದಿಂದ ನನ್ನ ಸಾಂವಿಧಾನಿಕ ಹಾಗೂ ರಾಜಕೀಯ ಕರ್ತವ್ಯಗಳನ್ನು ನಿಭಾಯಿಸಲು ಅಡ್ಡಿಯಾಗುತ್ತಿದೆ’ ಎಂದು ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.