ADVERTISEMENT

ಬೈಕ್‌ ಟ್ಯಾಕ್ಸಿ ಬಳಕೆಗೆ ಹೈಕೋರ್ಟ್‌ ಹಸಿರು ನಿಶಾನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 10:34 IST
Last Updated 23 ಜನವರಿ 2026, 10:34 IST
   

ಬೆಂಗಳೂರು: ‘ಅರ್ಹ ಮೋಟಾರ್‌ ಸೈಕಲ್‌ಗಳನ್ನು, ಬೈಕ್‌ ಟ್ಯಾಕ್ಸಿಗಳನ್ನಾಗಿ ಬಳಸಬಹುದು’ ಎಂದು ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾಗಿದ್ದ ರಿಟ್‌ ಮೇಲ್ಮನವಿಗಳ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದ್ದು ವಿಸ್ತೃತ ಆದೇಶ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.

‘ಬೈಕ್ ಟ್ಯಾಕ್ಸಿ ಸೇವೆಗಳಿಗೆ ಬಳಸುವ ಮೋಟಾರ್‌ ಸೈಕಲ್‌ಗಳು, ಮೋಟಾರು ವಾಹನ ಕಾಯ್ದೆ–1988ರ ಅಡಿಯಲ್ಲಿ ಸಾರಿಗೆ ವಾಹನಗಳ ವ್ಯಾಖ್ಯಾನಕ್ಕೆ ಒಳಪಡುತ್ತವೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ನ್ಯಾಯಪೀಠ, ‘ಕಾನೂನಿನ ಪ್ರಕಾರ ಅರ್ಜಿಗಳನ್ನು ಸಲ್ಲಿಸಿದ ನಂತರ ಅರ್ಹ ಮೋಟಾರ್‌ ಸೈಕಲ್‌ಗಳಿಗೆ 1988ರ ಮೋಟಾರು ವಾಹನ ಕಾಯ್ದೆಯ ಕಲಂ 74ರ ಅಡಿಯಲ್ಲಿ ಒಪ್ಪಂದದ ಸಾಗಣೆ ಪರವಾನಗಿ ನೀಡಬೇಕಾಗುತ್ತದೆ’ ಎಂದು ಸ್ಪಷ್ಟಪಡಿಸಿದೆ.

ADVERTISEMENT

‘ಮೋಟಾರು ವಾಹನಗಳ ಕಾಯ್ದೆ–1988ರ ಅನ್ವಯ ಮಾರ್ಗಸೂಚಿ ಮತ್ತು ನಿಯಮಗಳನ್ನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿಗಳು ಕಾರ್ಯಾಚರಣೆ ನಡೆಸುವಂತಿಲ್ಲ’ ಎಂದು  ಏಕಸದಸ್ಯ ನ್ಯಾಯಪೀಠ ಆದೇಶಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್‌ ಲಿಮಿಟೆಡ್‌ ಕಂಪನಿ, ಉಬರ್‌ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್‌ ಲಿಮಿಟೆಡ್‌, ವರೀಕೃತಿ ಮಹೇಂದ್ರ ರೆಡ್ಡಿ, ಮಧು ಕಿರಣ್‌, ರೊಪ್ಪೇನ್‌ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಪ್ರೈವೇಟ್‌ ಲಿಮಿಟೆಡ್‌ ಮತ್ತು ಬೈಕ್‌ ಟ್ಯಾಕ್ಸಿ ವೇಲ್ಫೇರ್‌ ಅಸೋಸಿಯೇಷನ್‌ ಪ್ರತಿನಿಧಿಗಳು ಈ ರಿಟ್‌ ಮೇಲ್ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.