ಬೆಂಗಳೂರು: ಹೈಕೋರ್ಟ್ ತೀರ್ಪು ನೋಡಿಕೊಂಡು ‘ಬೈಕ್ ಟ್ಯಾಕ್ಸಿ’ ಸೇವೆಗೆ ಅನುಮತಿ ನೀಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬಿಜೆಪಿಯ ಡಿ.ಎಸ್. ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾರ್ವಜನಿಕ ಸಾರಿಗೆ ಸಂಪರ್ಕವನ್ನು ಬಲಪಡಿಸಲು ಮತ್ತು ಕಡಿಮೆ ಮೊತ್ತದಲ್ಲಿ ತ್ವರಿತ ಸೇವೆಗೆ ಅವಕಾಶ ಮಾಡಿಕೊಡಲು ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಗಳಿಗೆ ‘ಬೈಕ್ ಟ್ಯಾಕ್ಸಿ’ ಸೇವೆ ಸಲ್ಲಿಸಲು 2021ರ ಜುಲೈನಿಂದ ಅವಕಾಶ ನೀಡಲಾಗಿತ್ತು. ಆದರೆ, ಕೆಲ ಖಾಸಗಿ ಆ್ಯಪ್ ಆಧಾರಿತ ಸಂಸ್ಥೆಗಳು ಮೋಟಾರು ವಾಹನ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಪೆಟ್ರೋಲ್ ದ್ವಿಚಕ್ರ ವಾಹನಗಳನ್ನೂ ಬಳಸಿಕೊಳ್ಳುತ್ತಿದ್ದರು. ಈ ಬಗ್ಗೆ ಹಲವು ದೂರುಗಳು ದಾಖಲಾಗಿದ್ದವು. ಕಾನೂನಿನಲ್ಲಿ ಪೆಟ್ರೋಲ್ ಆಧಾರಿತ ದ್ವಿಚಕ್ರ ವಾಹನಗಳ ಸೇವೆಗೆ ಅವಕಾಶ ಇಲ್ಲದ ಕಾರಣ ಎಲ್ಲ ಬೈಕ್ ಟ್ಯಾಕ್ಸಿ ಸೇವೆಯನ್ನೂ 2024ರ ಮಾರ್ಚ್‌ನಿಂದ ರದ್ದು ಮಾಡಲಾಗಿದೆ ಎಂದರು.
ಸರ್ಕಾರದ ಆದೇಶ ಪ್ರಶ್ನಿಸಿ, ಕೆಲ ಕಂಪನಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿದ್ದವು. ಪ್ರಕರಣವನ್ನು ಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.