
ಬೈರತಿ ಬಸವರಾಜು
ಬೆಂಗಳೂರು: ‘ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರನ್ನು ಸುಪರ್ದಿಗೆ ಪಡೆದು ವಿಚಾರಣೆ ನಡೆಸಲೇಬೇಕೆಂದು ಸಿಐಡಿ ಪ್ರತಿಪಾದಿಸುವುದಾದರೆ, ಸೀಮಿತ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅವಕಾಶವಿದೆ’ ಎಂದು ಬಸವರಾಜ ಪರ ವಕೀಲರು ಹೈಕೋರ್ಟ್‌ಗೆ ಅರುಹಿದರು.
ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ ಅವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಬಸವರಾಜ ಪರ ಪದಾಂಕಿತ ಹಿರಿಯ ವಕೀಲ ಸಂದೇಶ್ ಜೆ. ಚೌಟ, ‘ಗೌರವಾನ್ವಿತ ಮನೆತನದಿಂದ ಬಂದಿರುವ ಅರ್ಜಿದಾರರು ಸಮಾಜಕ್ಕೆ ತುಂಬಾ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅವರಿಗೆ ಯಾವುದೇ ಕ್ರಿಮಿನಲ್ ಚಟುವಟಿಕೆಗಳ ಹಿನ್ನೆಲೆ ಇಲ್ಲ. ಪ್ರಕರಣದಲ್ಲಿ ಅವರು ಭಾಗಿಯಾಗಿಲ್ಲ’ ಎಂದು ಪ್ರತಿಪಾದಿಸಿದರು.
‘ಅರ್ಜಿದಾರರ ವಿರುದ್ಧದ ಆರೋಪಗಳಿಗೆ ಮೇಲ್ನೋಟಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕು ಎಂದು ಹೇಳುತ್ತಿರುವುದು ನ್ಯಾಯಸಮ್ಮತವಾಗಿಲ್ಲ. ತನಿಖೆಗೆ ಸಹಕರಿಸಲು ಅವರು ಸದಾ ಸಿದ್ಧರಿದ್ದಾರೆ. ನ್ಯಾಯಾಲಯ ವಿಧಿಸುವ ಯಾವುದೇ ಷರತ್ತು ಪಾಲಿಸಲು ಬದ್ಧರಿದ್ದಾರೆ. ಆದ್ದರಿಂದ, ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು’ ಎಂದು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮಂಗಳವಾರಕ್ಕೆ (ಜ.20) ಮುಂದೂಡಿತು. ಸಿಐಡಿ ಪರ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ಮಂಗಳವಾರ ಪ್ರತಿವಾದ ಮಂಡಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.