
ಬೆಂಗಳೂರು: ‘ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಯಾಗಬೇಕು ಎಂಬುದು ನನ್ನ ವೈಯಕ್ತಿಕ ಬಯಕೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ, ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಕನ್ನಡ ಚಳವಳಿಗಾರರ ಸಮಿತಿಯು ಭಾನುವಾರ ಆಯೋಜಿಸಿದ್ದ ಜನರಾಜ್ಯೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅದಕ್ಕೂ ಮುನ್ನ ಕನ್ನಡ ಪರ ಹೋರಾಟಗಾರರು, ‘ತ್ರಿಭಾಷಾ ನೀತಿ ರದ್ದುಪಡಿಸಬೇಕು ಮತ್ತು ಕನ್ನಡ ಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನೂ ಹಿಂಪಡೆಯಬೇಕು’ ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ತಮ್ಮ ಮಾತಿನ ವೇಳೆ ಈ ವಿಷಯಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ ಅವರು, ‘ತ್ರಿಭಾಷಾ ನೀತಿಯ ಮೂಲಕ ಹಿಂದಿ ಹೇರಲಾಗುತ್ತಿದ್ದು, ಅದನ್ನು ತಡೆಯಬೇಕು ಎಂಬುದು ಕನ್ನಡಿಗರ ಬೇಡಿಕೆಯಾಗಿದೆ. ನಾನೂ ಇದರ ಪರವಾಗಿ ಇದ್ದೇನೆ. ಆದರೆ, ಸರ್ಕಾರವು ಏಕಾಏಕಿ ನಿರ್ಧಾರ ಮಾಡಲು ಬರುವುದಿಲ್ಲ. ಸಚಿವ ಸಂಪುಟ ಸಭೆಯಲ್ಲಿ ವ್ಯಕ್ತವಾಗುವ ಅಭಿಪ್ರಾಯದ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.
‘ಕನ್ನಡ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಗೃಹ ಸಚಿವ ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಉಪ ಸಮಿತಿ ರಚಿಸಲಾಗಿದೆ. ಅವರೊಂದಿಗೆ ಚರ್ಚಿಸಿ, ಶೀಘ್ರ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.