ADVERTISEMENT

ಆರೋಗ್ಯ ಇಲಾಖೆ: ಹಾಜರಾತಿ ಆಧರಿಸಿ ವೇತನ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 21:21 IST
Last Updated 21 ಏಪ್ರಿಲ್ 2022, 21:21 IST
   

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರಲು ಎಲ್ಲ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬಯೋಮೆಟ್ರಿಕ್‌ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸುವ ತೀರ್ಮಾನವನ್ನು ಇಲಾಖೆ ಕೈಗೊಂಡಿದೆ.

ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಸೋಮವಾರ ನಡೆಸಿದ ಸಚಿವಡಾ.ಕೆ.ಸುಧಾಕರ್‌, ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ವೈದ್ಯಕೀಯ ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಮತ್ತು ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ ಎಂದರು.

ADVERTISEMENT

ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೆ ಅವರ ಆಧಾರ್‌ ಆಧಾರಿತ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆಯೂ ಅಧಿಕೃತ ಆದೇಶ ಹೊರಡಿಸಲಾಗಿದೆ. ಕೋವಿಡ್‌ ಕಾರಣಕ್ಕೆ ನಿಲ್ಲಿಸಿದ್ದ ಬಯೋ ಮೆಟ್ರಿಕ್‌ ಹಾಜರಾತಿ ಪದ್ಧತಿಯನ್ನು ಮತ್ತೆ ಕಡ್ಡಾಯಗೊಳಿಸಲಾಗಿದೆ ಎಂದು ಸುಧಾಕರ್‌ ಹೇಳಿದರು.

ಡಿಡಿಒ ಹೊಣೆ: ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ (ಸ್ಯಾಲರಿ ಡ್ರಾಯಿಂಗ್‌ ಆಫಿಸರ್‌) ಪ್ರತಿ ತಿಂಗಳು ಎಇಬಿಎಎಸ್‌ನಲ್ಲಿ (ಆಧಾರ್‌ ಆಧರಿತ ಬಯೋಮೆಟ್ರಿಕ್‌ ಹಾಜರಾತಿ) ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿ, ಅದರ ಅನುಸಾರ ವೇತನ ಪಾವತಿಗೆ ವರದಿ ಸಿದ್ಧಪಡಿಸಬೇಕು. ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಸಲ್ಲಿಸಬೇಕು. ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಅಥವಾ ಕಡಿತಕ್ಕೆ ಸೂಚನೆ ನೀಡುತ್ತಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.